ದಾಂಡೇಲಿ: ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಸೇವೆಗೆ ಸಮಯಕ್ಕೆ ಸರಿಯಾಗಿ ಬರಬೇಕು. ರೋಗಿಗಳಿಗೆ ಉತ್ತಮ ಸೇವೆ, ಸೌಲಭ್ಯಗಳನ್ನು ನೀಡುವುದು ವೈದ್ಯರ ಕರ್ತವ್ಯ. ಈ ನಿಟ್ಟಿನಲ್ಲಿ ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸಬೇಕು. ಸೂಜ್ತ ರೀತಿಯಲ್ಲಿ ಜನತೆಗೆ ಸೇವೆ ನೀಡದಿದ್ದ ಪಕ್ಷದಲ್ಲಿ ಅಂತಹ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್ ವಿ ದೇಶಪಾಂಡೆ ಅವರು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿಯ ಸಭೆಯಲ್ಲಿ ಎಚ್ಚರಿಕೆ ನೀಡಿದರು.
ಅವರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿಯ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು. ಸಾರ್ವಜನಿಕರಿಗೆ ಆರೋಗ್ಯ ಸೇವೆಯನ್ನು ನೀಡುವಲ್ಲಿ ಸಿಬ್ಬಂದಿಗಳು ವಿಳಂಬ ನೀತಿಯನ್ನು ಅನುಸರಿಸುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಆಸ್ಪತ್ರೆಯಲ್ಲಿ ಕರ್ತವ್ಯ ಸಮಯವನ್ನು ಸರಿಯಾಗಿ ಪಾಲಿಸಬೇಕು. ದಿನದ 24 ಗಂಟೆಯೂ ಆರೋಗ್ಯ ಸೇವೆ ಲಭ್ಯವಿರಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕ ಅವರು ಸಿಬ್ಬಂದಿ ಕೊರತೆಯ ಬಗ್ಗೆ ಮಾಹಿತಿ ನೀಡಿದರು. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರಿ ಯೋಜನೆ ಕುರಿತು ಮಾಹಿತಿ ನೀಡುವ ಭಿತ್ತಿ ಚಿತ್ರಗಳನ್ನು ಆಸ್ಪತ್ರೆಯ ಗೋಡೆಗಳ ಮೇಲೆ ಹಾಕಬೇಕು. ಆಸ್ಪತ್ರೆಯ ಕೆಲವು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ, ಕರ್ತವ್ಯ ಲೋಪದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿ, ಸಮಯ ಪಾಲನೆ ಹಾಗೂ ಕರ್ತವ್ಯದ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಖಡಕ್ ಸೂಚನೆ ನೀಡಿದರು.
ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ಸುಧಾರಣೆಗೆ ಹಲವಾರು ಸಲಹೆ, ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ, ತಡ.ಪಂ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ ಹಾಲಮ್ಮನವರ, ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕ, ಪಿಎಸ್ಐ ಐ.ಆರ್.ಗಡ್ಡೇಕರ, ವೈದ್ಯರುಗಳಾದ ಡಾ.ರಾಜೇಶ ಪ್ರಸಾದ, ಡಾ.ಅರುಣಕುಮಾರ್, ಡಾ.ಅಖಿಲ್ ಅಹ್ಮದ್ ಕಿತ್ತೂರು, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಪ್ರತಾಪ ಸಿಂಗ್ ರಜಪೂತ, ಮಹಮ್ಮದ್ ರಫೀಕ್ ಖಾನ್, ರೇಣುಕಾ ಬಂದಂ, ಅವಿನಾಶ ಘೋಡ್ಕೆ ಮೊದಲಾದವರು ಉಪಸ್ಥಿತರಿದ್ದರು.