ಮಣಿಪುರ: ಬಿಷ್ಣುಪುರ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸಂಘಟನೆಯೊಂದು ಶನಿವಾರ ಕರೆ ನೀಡಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ರಾಜ್ಯದಾದ್ಯಂತ 5 ದಿನಗಳ ಕಾಲ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಿ ಮಣಿಪುರ ಸರ್ಕಾರ ಆದೇಶ ನೀಡಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಈ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಇಲಾಖೆಯ ಆಯುಕ್ತ ಎಚ್.ಜ್ಞಾನ್ ಪ್ರಕಾಶ್ ತಿಳಿಸಿದ್ದಾರೆ.
ಶನಿವಾರ ಮಧ್ಯಾಹ್ನ 3.35 ರ ಸುಮಾರಿಗೆ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ವಾಹನವೊಂದಕ್ಕೆ ಬೆಂಕಿಹಚ್ಚಿದ್ದರು. ಈ ಘಟನೆಯ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಕೆಲವರು ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದಾರೆ ಎಂದು ಪ್ರಕಾಶ್ ಹೇಳಿದ್ದಾರೆ.