ಸಂಶಯಾತ್ಮಕ ನಗದು ವ್ಯವಹಾರಗಳ ಬಗ್ಗೆ ಮಾಹಿತಿ ನೀಡಿ; ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ.:- ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್ಗಳು ತಮ್ಮ ಶಾಖೆಗಳಲ್ಲಿ ಪ್ರತೀ ದಿನ ಕಂಡುಬರುವ ಸಂಶಯಾತ್ಮಕ ನಗದು ವ್ಯವಹಾರಗಳ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ವೀಡಿಯೋ ಸಂವಾದದ ಮೂಲಕ ನಡೆದ ಜಿಲ್ಲೆಯ ಬ್ಯಾಂಕ್ ಅಧಿಕಾರಿಗಳ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಬ್ಯಾಂಕ್ಗಳಲ್ಲಿ 1 ಲಕ್ಷಕ್ಕೂ ಅಧಿಕ ಮೊತ್ತದ ನಗದು ಠೇವಣಿ ಮತ್ತು ನಗದು ಹಿಂಪಡೆಯುವ ಸಂಶಯಾತ್ಮಕ ಪ್ರಕರಣಗಳ ಕುರಿತಂತೆ ಬ್ಯಾಂಕ್ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಿ, ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಲ್ಲದೇ ಯುಪಿಐ ಹಣ ವರ್ಗಾವಣೆಗಳ ಮತ್ತು ಆರ್.ಟಿ.ಜಿ.ಎಸ್ ಹಣ ವರ್ಗಾವಣೆಗಳ ಬಗ್ಗೆಯೂ ಸಹ ನಿರಂತರವಾಗಿ ನಿಗಾವಹಿಸಿರಬೇಕು ಎಂದರು.

ಅಕ್ರಮ ಮತ್ತು ಸಂಶಯಾತ್ಮಕ ಹಣ ವರ್ಗಾವಣೆಯ ಮೂಲಕ ಚುನಾವಣೆಯಲ್ಲಿ ಮತದಾರರಿಗೆ ಹಣದ ಆಮಿಷ ಒಡ್ಡುವುದನ್ನು ತಡೆಯುವ ಉದ್ದೇಶದಿಂದ ಎಲ್ಲಾ ಬ್ಯಾಂಕ್ಗಳು ಅತ್ಯಂತ ಹೆಚ್ಚಿನ ಜವಾಬ್ದಾರಿಯಿಂದ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಂತೆ ತಿಳಿಸಿದರು.

ಎಲ್ಲಾ ಬ್ಯಾಂಕ್ಗಳು ತಮ್ಮ ಎಟಿಎಂಗಳಿಗೆ ಹಣ ತುಂಬುವ ವಾಹನಗಳ ಸಾಗಾಟದ ಕುರಿತ ಇರುವ ಪ್ರಾಮಾಣೀಕೃತ ಕಾರ್ಯ ವಿಧಾನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಾಗೂ ಇತರೆ ಶಾಖೆಗಳಿಗೆ ಹಣ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಚುನಾವಣಾ ಅಯೋಗ ಸೂಚಿಸಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾವತಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಡಾ. ಆನಂದಸಾ ಹಬೀಬ ಹಾಗೂ ಜಿಲ್ಲೆಯ ವಿವಿಧ ಬ್ಯಾಂಕ್ ಗಳ ಅಧಿಕಾರಿಗಳು ಉಪಸ್ಥಿತರಿದ್ದರು.