ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತಾದ ತೀರ್ಪು ಇಂದು (ಮಾ.22) ಪ್ರಕಟವಾಗಿದೆ. ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಹೈಕೋರ್ಟ್ ಆದೇಶ ಹೊರಡಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.
ಬೆಂಗಳೂರು, ಮಾರ್ಚ್ 22: ರಾಜ್ಯದ ಪಠ್ಯಕ್ರಮ (Karnataka State Curriculum) ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ (Karnataka High Court) ಅನುಮತಿ ನೀಡಿದೆ. ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಅಲ್ಲದೆ, ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದೆ.
ಬೋರ್ಡ್ ಪರೀಕ್ಷೆ ನಡೆಸುವ ಕರ್ನಾಟಕ ಸರ್ಕಾರದ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಭಾಗೀಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಅಲ್ಲದೆ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.
ಅದರಂತೆ, ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಟ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ್ದು, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿದೆ.