ಕಾರವಾರ, :- ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಡೆದ ಮತದಾನ ಪ್ರಮಾಣಕ್ಕಿಂತ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗರಿಷ್ಠ ಪ್ರಮಾಣದ ಮತದಾನ ಆಗುವಂತೆ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
ಅವರು ಜಿಲ್ಲಾ ಪಂಚಾಯತ್ ಆವರಣದಲ್ಲಿ, ಲೋಕಸಭಾ ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿಯಲ್ಲಿ, ಎನ್.ಆರ್.ಎಲ್.ಎಂ ಮಹಿಳಾ ಸ್ವ ಸಹಾಯ ಸಂಘದ ವತಿಯಿಂದ ಆಯೋಜಿಸಿದ್ದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮುಕ್ತ ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ಕಳೆದ ವಿಧಾನಸಭಾ ಚುನಾವಣೆ ಮತದಾನ ಪ್ರಮಾಣಕ್ಕಿಂತ ಹೆಚ್ಚಿನ ಮತದಾನ ನಡೆಯುವ ಗುರಿ ಹೊಂದಲಾಗಿದ್ದು, ಜಿಲ್ಲೆಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಪ್ರಜ್ಞಾವಂತ ಮತದಾರರಿದ್ದು, ಯಾವುದೇ ಆಸೆ ಆಮಿಷ ಒತ್ತಡಗಳಿಗೆ ಒಳಗಾಗದೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಮಹಿಳೆಯರು ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಯೋಜನೆಯ ಮೂಲಕ ಆರ್ಥಿಕವಾಗಿ ಸಬಲರಾಗುವ ಜೊತೆಗೆ ಸಾಮಾಜಿಕ ಜವಾಬ್ದಾರಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ, ಮತದಾನದ ಮಹತ್ವದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಿರುವ ಜಾಗೃತಿ ಜಾಥಾ ಮತ್ತು ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಮೂಲಕ ಜಿಲ್ಲೆಯ ಮತದಾನದ ಪ್ರಮಾಣ ಹೆಚ್ಚಳವಾಗಲಿ ಎಂದರು.
ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅದರ ಅಂಗವಾಗಿ ಎನ್.ಆರ್.ಎಲ್.ಎಂ ಸ್ವ ಸಹಾಯ ಸಂಘದ ಗುಂಪಿನ ಮಹಿಳೆಯರ ಮೂಲಕ ಜಾಗೃತಿ ಜಾಥಾ ಆಯೋಜಿಸಲಾಗಿದೆ, ಮಹಿಳಾ ಮತದಾರರಿಗೆ ಹೆಚ್ಚಿನ ಅರಿವು ಮೂಡಿಸಲಾಗುತ್ತಿದ್ದು, ಜಿಲ್ಲೆಯ ಎಲ್ಲಾ ಮತದಾರರು ಮೇ 7 ರಂದು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಹೇಳಿದರು.
ಉಪ ವಿಭಾಗಾಧಿಕಾರಿ ಕನಿಷ್ಕ, ಸಹಾಯಕ ಚುನಾವಣಾಧಿಕಾರಿ ಅಜ್ಜಪ್ಪ ಸೊಲಗದ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಹಿಳಾ ಸ್ವ ಸಹಾಯ ಸಂಘದ ಮಹಿಳೆಯರು ತಯಾರಿಸಿದ ವವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ, ಮಹಿಳೆಯರಿಂದ ಮತದಾನ ಜಾಗೃತಿ ಮೂಡಿಸುವ ರಂಗೋಲಿ ರಚನೆ, ಮತದಾರರ ಪ್ರತಿಜ್ಞಾ ವಿಧಿ ಭೋದನೆ, ಸಹಿ ಸಂಗ್ರಹ ಅಭಿಯಾನ ಮತ್ತು ಜಾಥಾ ಕಾರ್ಯಕ್ರಮ ನಡೆಯಿತು.