ಕೊಪ್ಪಳ, ಏಪ್ರಿಲ್ 24: ಬೆಂಗಳೂರಿನಲ್ಲಿ ರಾಮ ನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೂಡ ಅಂಥದ್ದೇ ಘಟನೆ ವರದಿಯಾಗಿದೆ. ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.
ಶ್ರೀರಾಮನಗರದ ಸನ್ ಶೈನ್ ಬಾರ್ನಲ್ಲಿ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ. ಮದ್ಯ ಸೇವನೆಯ ವೇಳೆ ಶ್ರೀರಾಮ ನಗರದ ಕುಮಾರ್ ರಾಠೋಡ್ ಎಂಬಾತ ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಅದೇ ವೇಳೆ ಮುಸ್ಲಿಂ ಯವಕರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಗಾಯಾಳು ಕುಮಾರ್ ರಾಠೋಡ್ರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.