ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ಭಂಗವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ (Mysuru) ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ (Legislative Council Elections) ಮೈತ್ರಿ ಇರುತ್ತದೆ. ಜೆಡಿಎಸ್‌ಗೆ (JDS) 2 ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. ಇಂದು ಸಂಜೆ ನಡ್ಡಾರವರು ಬಿಡುಗಡೆ ಮಾಡಲಿದ್ದಾರೆ ಎಂದರು.
ನರೇಂದ್ರ ಮೋದಿಯವರು 400ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯವೋ ಇದು ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು (Narendra Modi) ಈಗಲೇ ಯೋಚಿಸಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾನ ಗೆಲ್ಲುತ್ತೇವೆ. ಕಾಂಗ್ರೆಸ್‌ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ? ವಿಧಾನಸಭಾ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯ ಎಂದು ಹೇಳಿದರು.
ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆಕಟ್ಟೆ ಬತ್ತಿಹೋಗಿದೆ. ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲಮನ್ನಾ ಮಾಡಿ ರೈತರಿಗೆ ನೆರವಾಗಬೇಕು. ಸಾಲಮನ್ನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಇನ್ನೂ ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ಪ್ರಕರಣ ಪಾರದರ್ಶಕವಾಗಿ ನಡೆಯಬೇಕಿದ್ದರೆ ಸಿಬಿಐಗೆ ಕೊಡಬೇಕು. ಬಹುತೇಕ ಜನರ ಅಭಿಪ್ರಾಯ ಇದೆ. ಸಿಎಂ ಅಭಿಪ್ರಾಯ ಅವರದ್ದು. ಇದರಿಂದ ಸಿಬಿಐಗೆ ತನಿಖೆ ವಹಿಸಬೇಕು ಎಂದು ಒತ್ತಾಯಿಸಿದರು.
ಈಶ್ವರಪ್ಪರ ಬಗ್ಗೆ ಮಾಧ್ಯಮದವರು ಪ್ರಶ್ನೆ ಕೇಳುತ್ತಿದ್ದಂತೆ ಉತ್ತರಿಸಲು ನಕಾರ ಮಾಡಿದ ಅವರು, ಈ ಬಗ್ಗೆ ಮಾತನಾಡಲು ಇಷ್ಟ ಪಡುವುದಿಲ್ಲ. ಶಿವಮೊಗ್ಗದಲ್ಲಿ ರಾಘವೇಂದ್ರ 2.5 ಲಕ್ಷ ಲೀಡ್‌ಗಳಿಂದ ಗೆಲ್ಲುತ್ತಾರೆ ಎಂದರು.