ಮೈಸೂರು: ಕಲುಷಿತ ನೀರು ಸೇವಿಸಿ ಕೆ.ಸಾಲುಂಡಿಯಲ್ಲಿ ಓರ್ವ ಯುವಕ ಮೃತಪಟ್ಟು, 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣ ಬೆನ್ನಲ್ಲೆ ಮತ್ತೊಂದು ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಾಗಿ 114 ಮಂದಿ ಅಸ್ವಸ್ಥರಾಗಿದ್ದಾರೆ. 94 ಮಂದಿಗೆ ಚಿಕಿತ್ಸೆ ಮುಂದುವರೆದಿದೆ. 114 ಜನರ ಪೈಕಿ ಮೂವರಲ್ಲಿ ಕಾಲರ ರೋಗ ಪತ್ತೆಯಾಗಿದೆ. ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಗ್ರಾಮಸ್ಥರಿಗೆ ಧೈರ್ಯ ತುಂಬಿ, ಸೂಕ್ತ ವ್ಯವಸ್ಥೆ ಬಗ್ಗೆ ಭರವಸೆ ನೀಡಿದ್ದಾರೆ.
ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಗ್ರಾಮಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ದೂರವಾಣಿ ಮೂಲಕ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀತಿ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ರು. ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಬಂದಿದ್ದೇನೆ. ಮಳೆಗಾಲ ಇನ್ನು ಕಡಿಮೆಯಾಗಿಲ್ಲ. ಕೂಡಲೇ ಅಧಿಕಾರಿಗಳು ಗ್ರಾಮದ ಎಲ್ಲಾ ಚರಂಡಿಗಳನ್ನು ಸ್ವಚ್ಛಗೊಳಿಸಿ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಬೇಕು. ಗ್ರಾಮಸ್ಥರಿಗೆ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಬೇಕು. ಸ್ಥಗಿತಗೊಂಡಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಈಗಾಗಲೇ ಮೂರು ಟ್ಯಾಂಕರ್ಗಳಿಂದ ಶುದ್ಧ ಕುಡಿಯುವ ನೀರನ್ನು ಗ್ರಾಮಕ್ಕೆ ಸರಬರಾಜು ಮಾಡಲಾಗುತ್ತಿದೆ. ಗ್ರಾಮಸ್ಥರಿಗೆ ಆರೋಗ್ಯ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಡಾ ಎಚ್ ಸಿ ಮಹದೇವಪ್ಪ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಸಭೆಯಲ್ಲಿ ಜಿಪಂ ಸಿಇಒ ಗಾಯಿತ್ರಿ, ತಹಶೀಲ್ದಾರ್ ಶಿವಕುಮಾರ್ ಸೇರಿ ಹಲವರು ಭಾಗಿಯಾಗಿದ್ದಾರೆ.
ಮತ್ತೊಂದೆಡೆ ಕಾಲರ ಪತ್ತೆಯಾಗಿರೋ ಹಿನ್ನಲೆ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಅಲಾರ್ಟ್ ಆಗಿದೆ. ಇಡೀ ಗ್ರಾಮಸ್ಥರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಲು ಮುಂದಾಗಿದ್ದು, ತೀವ್ರ ಅಸ್ವಸ್ಥರಾದವರನ್ನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ.