ಹೊನ್ನಾವರ ಜೂನ್ 20 : ರಾಜ್ಯ ಕಾಂಗ್ರೆಸ್ ಸರ್ಕಾರದ ಪೆಟ್ರೋಲ್ ಡಿಸೆಲ್ ಬೆಲೆ ಏರಿಕೆ ಖಂಡಿಸಿ ಹೊನ್ನಾವರದ ಶರಾವತಿ ವೃತ್ತದಲ್ಲಿ ಹೊನ್ನಾವರ ಬಿಜೆಪಿ ಮಂಡಲ ಹಾಗೂ ಜೆಡಿಎಸ್ ವತಿಯಿಂದ ಸಿಎಂ ಸಿದ್ಧರಾಮಯ್ಯ ಪ್ರತಿಕೃತಿ ದಹಿಸಿ, ಕಾಂಗ್ರೆಸ್ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯ್ತು..
ಪಟ್ಟಣದ ಶರಾವತಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಖಾಲಿ ಚೊಂಬು ಹಿಡಿದು ರಾಜ್ಯದ ಜನತೆಗೆ ಗ್ಯಾರಂಟಿ ಹೆಸರಿನಲ್ಲಿ ಮೋಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು..
ಬಳಿಕ ಸಿಎಂ ಸಿದ್ಧರಾಮಯ್ಯ ಪ್ರತಿಕೃತಿಗೆ ಬೆಂಕಿ ಹಚ್ಚಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ರು. ನಂತರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ರು. ಈ ವೇಳೆ ಪೋಲಿಸರು ಹಾಗೂ ಕಾರ್ಯಕರ್ತರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು..
ಈ ವೇಳೆ ಹೊನ್ನಾವರ ಬಿಜೆಪಿ ಮಂಡಲದ ಅಧ್ಯಕ್ಷ ಮಂಜುನಾಥ ನಾಯ್ಕ ನುಡಿಸಿರಿ ವಾಹಿನಿಯೊಂದಿಗೆ ಮಾತನಾಡಿ, ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಡಿಸೆಲ್ ದರ ಏರಿಕೆ ಮಾಡಿ ಜನರ ಜೀವನದ ಜೊತೆ ಚೆಲ್ಲಾಟ ಆಡ್ತಿದೆ. ಕೂಡಲೇ ಏರಿಕೆ ಮಾಡಿರುವ ಬೆಲೆಯನ್ನು ಇಳಿಕೆ ಮಾಡದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ರು..
ಜೆಡಿಎಸ್ ತಾಲೂಕ ಘಟಕದ ಅಧ್ಯಕ್ಷ ಟಿಟಿ ನಾಯ್ಕ ಮಾತನಾಡಿ, ಗ್ಯಾರಂಟಿ ಯೋಜನೆಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿಗಳನ್ನು ಸರಿಯಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡಿಲ್ಲ. ಲೋಕಸಭೆ ಚುನಾವಣೆ ಫಲಿತಾಂಶ ಬಂದ ಮೇಲೆ ರಾಜ್ಯದಲ್ಲಿ ಅವರ ಬಲ ಕುಗ್ಗಿ ಹೋಗಿದೆ. ಆದ್ದರಿಂದ ಈಗ ಪೆಟ್ರೋಲ್ ಡಿಸೆಲ್ ಹಾಗೂ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ಪಕ್ಷದ ದೃಷ್ಟಿಕೋನದಿಂದ ಪ್ರತಿಭಟನೆ ಮಾಡುತ್ತಿಲ್ಲ ಜನಸಾಮಾನ್ಯರಿಗೆ ಅನುಕೂಲವಾಗುವ ಉದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದೇವೆ. ಹೀಗಾಗಿ ಕೂಡಲೇ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿದ್ರು..
ಪ.ಪಂ ಮಾಜಿ ಸದಸ್ಯೆ ಶ್ರೀಕಲಾ ಶಾಸ್ತ್ರೀ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಬಿಟ್ಟಿ ಭಾಗ್ಯಗಳು ನಮಗೆ ಬೇಡ, ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡಿದ್ರೆ ಸಾಕು. ದಿನನಿತ್ಯ ಬಳಕೆ ಮಾಡುವ ವಸ್ತುಗಳ ಬೆಲೆ ಏರಿಕೆ ಮಾಡಿದ್ರೆ ಮುಂದೆ ಜೀವನ ಮಾಡುವುದು ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಎಲ್ಲರೂ ದುಡಿದು ತಿಂದು ಜೀವನ ಮಾಡೋರೆ ಆದ್ರಿಂದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿದ್ರು..
ಈ ವೇಳೆ ಹೊನ್ನಾವರ ಬಿಜೆಪಿ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು, ಹಾಗೂ ಜೆಡಿಎಸ್ ತಾಲೂಕ ಘಟಕದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು. ಇನ್ನೂ ರಾಜ್ಯ ಸರ್ಕಾರದ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸುತ್ತಿದ್ದು, ಜನಸಾಮಾನ್ಯರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಬೆಲೆ ಇಳಿಕೆ ಮಾಡುತ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.