ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಕೋವಿಡ್: ಮಾಸ್ಕ್ ಧರಿಸದಿದ್ದರೆ ದಂಡ

ನವದೆಹಲಿ: ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಗುರುವಾರ ದೆಹಲಿ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ನಿಯಮ ಉಲ್ಲಂಘಿಸಿದರೆ 500 ರೂ ದಂಡ ವಿಧಿಸುವುದಾಗಿ ತಿಳಿಸಿದೆ.

ಸರ್ಕಾರ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ನಾಲ್ಕು ಚಕ್ರದ ವಾಹನಗಳಲ್ಲಿ ಪ್ರಯಾಣಿಸುವವರಿಗೆ ದಂಡ ವಿಧಿಸಲಾಗುವುದಿಲ್ಲ ಎಂದು ಹೇಳಿದೆ.

ದೆಹಲಿಯ ಲೋಕನಾಯಕ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಯಲ್ಲಿ ವಂಶವಾಹಿ ಸಂರಚನೆ ವಿಶ್ಲೇಷಣೆಗಾಗಿ ಕಳುಹಿಸಿದ್ದ ಮಾದರಿಗಳಲ್ಲಿ ಕೊರೊನಾ ವೈರಸ್‌ನ ರೂಪಾಂತರಿಯಾದ ಓಮೈಕ್ರಾನ್‌ನ ಹೊಸ ಉಪತಳಿ BA 2.75 ಪತ್ತೆಯಾಗಿದೆ. ಇದು ಹೆಚ್ಚಿನ ಪ್ರಸರಣ ದರವನ್ನು ಹೊಂದಿದೆ ಎಂದು ಎಲ್‌ಎನ್‌ಜೆಪಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸುರೇಶ್ ಕುಮಾರ್ ತಿಳಿಸಿದ್ದಾರೆ.

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ 500 ರೂಪಾಯಿ ದಂಡ ವಿಧಿಸಲಾಗುವುದು ಎಂದು ದೆಹಲಿ ಸರ್ಕಾರ ಹೇಳಿದೆ.

ಬುಧವಾರ, ದೆಹಲಿಯಲ್ಲಿ 2,146 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇ 17.83 ಕ್ಕೆ ಏರಿದ್ದು, 8 ಜನರು ಸಾವನ್ನಪ್ಪಿದ್ದಾರೆ. ಇದು 180 ದಿನಗಳಲ್ಲಿ ಅತಿ ಹೆಚ್ಚು ಮರಣ ಪ್ರಮಾಣವಾಗಿದೆ.