ಮುಂದಿನ 7 ದಿನಗಳ ಕಾಲ ರಾಜ್ಯಕ್ಕೆ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಮಳೆರಾಯನ ಆರ್ಭಟ ಮುಂದುವರಿಯಲಿದೆ. ಮುಂದಿನ ಏಳು ದಿನಗಳ ಕಾಲ ರಾಜ್ಯಕ್ಕೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ 45-55 ಕಿಮೀ ವೇಗದಲ್ಲಿ ನಿರಂತರವಾಗಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಕರಾವಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶನಿವಾರ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಗಾಳಿ- ಮಳೆಯಾಗುವ ಸಾಧ್ಯತೆಯಿದ್ದು, ಆರೆಂಟ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ 2 ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.