ಕರ್ನಾಟಕದಲ್ಲಿ ಎಸಿಬಿ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ: ಇನ್ಮುಂದೆ ಲೋಕಾಯುಕ್ತಕ್ಕೇ ಫುಲ್ ಪವರ್.!

ಬೆಂಗಳೂರು: ಎಸಿಬಿ ರಚನೆ ಆದೇಶವನ್ನು ರದ್ದು ಮಾಡಿ, ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಆದೇಶಿಸಿದೆ. ಕರ್ನಾಟಕದ ಎಸಿಬಿ ರದ್ದು ಮಾಡಿ ಬಾಕಿ ಉಳಿದಿರುವ ಪ್ರಕರಣಗಳನ್ನು ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಸಿದ್ದರಾಮಯ್ಯ ಸಿಎಂ ಆಗಿದ್ದ 2016 ರ ಕಾಂಗ್ರೆಸ್ ಸರ್ಕಾರದ ಅಧಿಕಾರದಲ್ಲಿ ಕರ್ನಾಟಕದಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಈ ಮೂಲಕ ಲೋಕಾಯುಕ್ತ ಪೊಲೀಸ್ ಗಿಂತಲೂ ಹೆಚ್ಚಿನ ಅಧಿಕಾರವನ್ನು ಎಸಿಬಿಗೆ ನೀಡಿತ್ತು.

ಎಸಿಬಿ ರಚನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಕೋರ್ಟ್​ಗೆ ಸಲ್ಲಿಕೆಯಾಗಿದ್ದವು. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಅಪರಾಧ ದಾಖಲು ಮತ್ತು ತನಿಖೆಗೆ ಸಂಬಂಧಿಸಿದಂತೆ ಇದ್ದ ಅಧಿಕಾರವನ್ನು ಲೋಕಾಯುಕ್ತ ಪೊಲೀಸರಿಂದ ಹಿಂಪಡೆದಿದ್ದ ಅಧಿಸೂಚನೆಯನ್ನು 2016ರ ಮಾ.19ರಂದು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

ಈ ಬಗ್ಗೆ ಇಂದು ಅರ್ಜಿಯ ವಿಚಾರಣೆಯ ಬಳಿಕ ತನ್ನ ತೀರ್ಪನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ನ್ಯಾಯಮೂರ್ತಿ ಹೇಮಲೇಖಾ ಅವರನ್ನು ಒಳಗೊಂಡ ನ್ಯಾಯ ಪೀಠವು ಪ್ರಕಟಿಸಿದೆ.

ಕರ್ನಾಟಕ ಹೈಕೋರ್ಟ್ ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿದೆ ಮತ್ತು ಎಸಿಬಿ ಮುಂದೆ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ನಿರ್ದೇಶಿಸಿದೆ. ಈ ಮೂಲಕ ಲೋಕಾಯುಕ್ತಕ್ಕೆ ಮತ್ತೆ ಬಲ ಬಂದಂತಾಗಿದೆ.

ಇನ್ನು 3 ವರ್ಷದ ಅವಧಿಗೆ ಕರ್ನಾಟಕ ಲೋಕಾಯುಕ್ತಕ್ಕೆ ಅಧಿಕಾರಿಗಳನ್ನು ನೇಮಕ ಮಾಡಬೇಕು. ಈ ನೇಮಕಾತಿಯ ವೇಳೆ ಅರ್ಹತೆಯನ್ನು ಮಾತ್ರವೇ ಪರಿಗಣಿಸಬೇಕು. ಜಾತಿ ಆಧರಿಸಿ ಲೋಕಾಯುಕ್ತ, ಉಪ ಲೋಕಾಯುಕ್ತರನ್ನು ನೇಮಕ ಮಾಡುವಂತಿಲ್ಲ. ಭ್ರಷ್ಟಾಚಾರ ಆರೋಪ ಹೊತ್ತವರು ಪಾರಾಗದಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಬೇಕು ಎಂಬುದಾಗಿ ಸೂಚಿಸಿದೆ.