ನದಿಯನ್ನೇ ಬದಲಾಯಿಸಿದ ಸಿಎಂ ಎಕ್ಸ್ ಖಾತೆ : ಗಂಗಾವಳಿಯ ಬದಲಾಗಿ ಕಾಳಿ ಎಂದು ಬರೆದಿರುವ ಪೋಸ್ಟ್

ಅಂಕೋಲಾ, ಜು.22 : ತಾಲೂಕಿನ ಶಿರೂರಿನ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ನಂತರ ಸಿಎಂ ಸಿದ್ದರಾಮಯ್ಯ ಅವರ ಎಕ್ಸ್ ಖಾತೆಯಲ್ಲಿ ಮಾಡಿದ ಪೋಸ್ಟ್‌ನಲ್ಲಿ ನದಿಯ ಹೆಸರು ಬದಲಾವಣೆಯಾಗಿದ್ದು ವಿವಾದಕ್ಕೆ ಕಾರಣವಾಗಿದೆ. ರವಿವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ದುರ್ಘಟನಾ ಸ್ಥಳ ಪರಿಶೀಲನೆ ಮಾಡಿ ರಕ್ಷಣಾ ಕಾರ್ಯದ ವಿಚಾರಣೆ ಮಾಡಿದ್ದರು. ನಂತರ ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡು ದುರಂತದ ಸ್ಥಳದಲ್ಲಿ ಇರುವ ಗಂಗಾವಳಿ ನದಿಯ ಬದಲಾಗಿ ಕಾಳಿ ನದಿ ಎಂದು ಬರೆದಿದ್ದು, ಪೋಸ್ಟ್ ಮಾಡುವವರು ಕನಿಷ್ಠ ಪ್ರಜ್ಞೆಯೂ ನದಿಯನ್ನೇ ಬದಲಾಯಿಸಿದ್ದಾರೆ…

ಮಾಧ್ಯಮದವರು ನಿರಂತರವಾಗಿ ಆರು ದಿನಗಳಿಂದ ವರದಿ ಮಾಡುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಮಾಜಿಕ ಮಾಧ್ಯಮಗಳನ್ನು ನಿರ್ವಹಣೆ ಮಾಡುತ್ತಿದ್ದವರಿಗೆ ಈ ವಿಷಯ ತಿಳಿದಿಲ್ಲವೇ ಎನ್ನುವುದು ಪ್ರಶ್ನೆಯಾಗಿದೆ.

ಏನಿದೆ ಪೋಸ್ಟ್‌ನಲ್ಲಿ..?
ಮುಖ್ಯಮಂತ್ರಿ ಸಿದ್ದರಾಮಯ್ಯ ಖಾತೆಯಿಂದ ಹಂಚಿಕೊಂಡ ಪೋಸ್ಟ್ ನಲ್ಲಿ, ‘ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಭೇಟಿ ನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದೆ. ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ಕಾರ್ಯಕ್ಷಮತೆಗೆ ನಿಜಕ್ಕೂ ಶ್ಲಾಘನೀಯ’ ಎಂದು ಬರೆಯಲಾಗಿದೆ. ಮುಂದುವರೆದು ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು, ಅಗತ್ಯ ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದ್ದೇನೆ ಎಂದು ಟ್ವಿಟ್ ಮಾಡಿದ್ದಾರೆ.

ಈ ಪೋಸ್ಟ್ ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದು ಕಾಳಿ ನದಿಯಲ್ಲ ಗಂಗಾವಳಿ ನದಿ, ಕಾಟಾಚಾರಕ್ಕೆ ಸಿಎಂ ಈ ಕಡೆ ಬಂದಿದ್ದು, ನೀವು ಕೂಡ ವಿಷಯ ಛಾಪಿಸುವಲ್ಲಿ ಎಂದು ಒಬ್ಬರು ಕಮೆಂಟ್ ಮಾಡಿ ಆಕ್ಷೇಪಿಸಿದ್ದಾರೆ.