ತುಮಕೂರು/ಬೆಂಗಳೂರು ಗ್ರಾಮಾಂತರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವೃದ್ಧೆಯೊಬ್ಬರ ಬರ್ಬರ ಕೊಲೆಯಾಗಿದೆ. ಮದ್ದಮ್ಮ (68) ಮೃತ ದುರ್ದೈವಿ. ತುಮಕೂರಿನ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಜೋಗಯ್ಯನ ಪಾಳ್ಯದಲ್ಲಿ ಘಟನೆ ನಡೆದಿದೆ.
ಮದ್ದಮ್ಮ ಹುಣಸೆಕಟ್ಟೆ ಗ್ರಾಮದಲ್ಲಿ ನಡೆದ ದೇವರ ಉತ್ಸವ ಮುಗಿಸಿಕೊಂಡು ರಾತ್ರಿ ಮನೆಗೆ ತೆರಳುತ್ತಿದ್ದರು. ಈ ವೇಳೆ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ನಂತರ ಆಕೆಯ ಮೈ ಮೇಲೆ ಇದ್ದ ಚಿನ್ನದ ಸರ ಕದ್ದಿದ್ದಾರೆ. ಬಳಿಕ ಶವವನ್ನು ನಿರ್ಮಾಣ ಹಂತದ ಕಟ್ಟಡದ ಬಳಿ ಎಸೆದು ಪರಾರಿ ಆಗಿದ್ದಾರೆ.
ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶಿರಾ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.