ಪ್ರತ್ಯೇಕ ಕಡೆಗಳಲ್ಲಿ ಅಪಘಾತ; ಓವರ್‌ ಸ್ಪೀಡ್‌ ಯಡವಟ್ಟು, ಪ್ರಾಣಕ್ಕೆ ತಂತು ಕುತ್ತು

ಮಂಡ್ಯ: ಕೆಎಸ್‌ಆರ್‌ಟಿಸಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದ್ದು, ಐವರು ಗಾಯಗೊಂಡಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ. ಮಂಡ್ಯದ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ.

ಓವರ್‌ ಟೇಕ್‌ ಮಾಡುವ ವೇಳೆ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಸಿಪ್ಟ್ ಕಾರಿಗೆ ಹಿಂಬದಿಯಿಂದ ಬಂದ ಬಸ್‌ ಡಿಕ್ಕಿ ಹೊಡೆದಿದೆ. ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಗ್ರಾಮದ ಕುಟುಂಬವೊಂದು ಬೆಂಗಳೂರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ಐದು ಜನರಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ನಾಲ್ವರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳನ್ನು ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.