ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯೊಂದಿಗೆ, ಕೆಲವೆಡೆ ಚದುರಿದಂತೆ ಅತಿ ಲಘುವಾಗಿ ಮಳೆಯಾಗಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲೂ ವರುಣ ಅಬ್ಬರಿಸಲಿದ್ದಾನೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಭಾರೀ ಮಳೆಯಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಗದಗ , ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.
ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಜಿಲ್ಲೆಯಾದ್ಯಂತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 20 ಡಿ.ಸೆ ಇರಲಿದೆ.
ಯೆಲ್ಲೋ ಅಲರ್ಟ್
ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸಲಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ರಾಯಚೂರು ಹಾಗೂ ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಮೂರು ದಿನ ಮೀನುಗಾರರಿಗೆ ಎಚ್ಚರಿಕೆಯನ್ನು ಕೊಡಲಾಗಿದೆ.