ಶ್ರೀನಗರ: ಜಮ್ಮುವಿನ ಸುಂಜ್ವಾನ್ ಸೇನಾ ನೆಲೆಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಯೋಧ ಗಾಯಗೊಂಡಿದ್ದಾರೆ. ಉಗ್ರರು ಸೇನಾ ನೆಲೆಯ ಸಮೀಪದಿಂದಲೇ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ 10:50ರ ಸುಮಾರಿಗೆ ದಾಳಿ ಈ ನಡೆದಿದೆ. ಸೇನಾ ನೆಲೆಯ ಸಮೀಪದಲ್ಲಿ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.
ಸೆ.18 ರಂದು ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಹಂತದ ವಿಧಾನಸಭೆ ಚುನಾವಣೆ ನಡೆಯಲಿದೆ. ವಿಧಾನಸಭಾ ಚುನಾವಣೆಯು ಸೆ.18, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ನಡೆಯಲಿದೆ. ಅಕ್ಟೋಬರ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಚುನಾವಣೆಗೂ ಮುನ್ನ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಉದ್ವಿಗ್ನತೆ ಉಲ್ಬಣಗೊಂಡಿದೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸುತ್ತಿವೆ. ಚುನಾವಣಾ ಕರ್ತವ್ಯಗಳಿಗಾಗಿ ಸುಮಾರು 300 ಅರೆಸೇನಾ ಪಡೆಗಳ ತುಕುಡಿಗಳನ್ನು ನಿಯೋಜಿಸಲಾಗಿದೆ.
ಆ.31 ರಂದು ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯ ಗುರೇಜ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದವು. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‍ಒಸಿ) ಎರಡು ಪ್ರತ್ಯೇಕ ಎನ್‍ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದರು.