ಬೆಂಗಳೂರು, ಸೆ.12: ಬಸ್ ಪ್ರಯಾಣಿಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಬಿಎಂಟಿಸಿಗೆ ಹೊಸದಾಗಿ 840 ಬಸ್ಗಳು ಸೇರ್ಪಡೆಯಾಗಲಿವೆ. ಮೊದಲ ಹಂತದಲ್ಲಿ ಬಿಎಂಟಿಸಿ 100 ಹೊಸ ಬಸ್ಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ‘ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ ಎಂದರು.
ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ ಬಸ್ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್ಗಳನ್ನು ಆರಂಭಿಸುತ್ತಿದ್ದೇವೆ. ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು.
ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ, ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ. ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ. ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ, ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.
ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4 ರಿಂದ 5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ಗಳನ್ನು ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದರು.
ಈ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್, ಕೆಕೆಆರ್ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೊಸ ಮಾದರಿಯ BS 6 ಬಸ್ ವಿಶೇಷತೆಗಳು*
- ಪರಿಸರ ಸ್ನೇಹಿ ಬಸ್
- ಬಿಎಸ್ 4 ಬಸ್ ಗೆ ಹೋಲಿಸಿದ್ರೆ ಶೇಕಡಾ 90 ರಷ್ಟು ಮಾಲಿನ್ಯ ಮಟ್ಟ ಕಮ್ಮಿ
- 11 ಮೀಟರ್ ಉದ್ದ, ಹವಾನಿಯಂತ್ರಣರಹಿತ, ಡೀಸೆಲ್ ಚಾಲಿತ ಬಸ್
- ಪ್ರಯಾಣಿಕರ ಸುರಕ್ಷತೆಗಾಗಿ 3 ಸಿಸಿಟಿವಿ ಅಳವಡಿಕೆ
- 3 ಎಲ್.ಇ.ಡಿ ಬೋರ್ಡ್
- ವಾಯ್ಸ್ ಅನೌನ್ಸ್ಮೆಂಟ್ ವ್ಯವಸ್ಥೆ
- ಮಹಿಳೆಯರ ಸೇಫ್ಟಿಗೆ ತುರ್ತು ಪ್ಯಾನಿಕ್ ಅಲಾರ್ಮ್ ಬಟನ್
- ಅಗ್ನಿ ಅವಘಡ ತಪ್ಪಿಸಲು FDAS
- ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರ ನಿಲುಗಡೆಗೆ ಸ್ಟಾಪ್ ಬಟನ್ ಇವೆ.