ಬೆಂಗಳೂರು: ಕರಾವಳಿಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ ಮತ್ತು ಹಾವೇರಿ, ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಪ್ರತ್ಯೇಕ ಕಡೆ ಭಾರೀ ಮಳೆಯಾಗಲಿದೆ.
ಮಲೆನಾಡಿನ ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿ.ಸೆ ಇರಲಿದೆ.
ಗುಡುಗು ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ 14 ಜಿಲ್ಲೆಗಳಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ ಸೇರಿದಂತೆ ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.