ಬೆಂಗಳೂರು: ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಧೀರಜ್ (5) ಎಂಬ ಮಗು ಸಾವನ್ನಪ್ಪಿದೆ. ತಂದೆ ಬಾಲರಾಜ್, ತಾಯಿ ನಾಗಲಕ್ಷ್ಮಿ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಾಲರಾಜ್ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಮಗನಿಗಾಗಿ ಮನೆಗೆ ಕೇಕ್ ತೆಗೆದು ಕೊಂಡು ಹೋಗಿದ್ದರು. ಮನೆಯಲ್ಲಿ ಪತ್ನಿ ಮತ್ತು ಮಗುವಿನ ಜತೆ ಸೇರಿ ಮೂವರು ಕೇಕ್ ತಿಂದಿದ್ದರು. ಕೇಕ್ ತಿಂದ ನಂತರ ಮೂವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ.
ಕೂಡಲೇ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಮೂವರ ಸ್ಥಿತಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಧೀರಜ್ ತೀವ್ರ ಅಸ್ವಸ್ಥಗೊಂಡಿದ್ದರಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಬಾಲರಾಜ್ , ನಾಗಲಕ್ಷ್ಮಿ ದಂಪತಿ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.