ಮಂಗಳೂರು, ನ.05: ನೆರೆ ಜಿಲ್ಲೆ ಕಾಸರಗೋಡು ಸಮೀಪದ ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ಯುವಕರ ತಂಡವೊಂದು ಇತ್ತೀಚೆಗೆ ದಾಳಿ ನಡೆಸಿದೆ. ಸ್ವಾಮೀಜಿ ಕಾಸರಗೋಡಿನ ಬೋವಿಕ್ಕಾನ-ಇರಿಯಣ್ಣಿ ಮಾರ್ಗಮಧ್ಯೆ ಕಾರಿನಲ್ಲಿ ಸಂಚರಿಸುತ್ತಿದ್ದಾಗ ದಾಳಿ ನಡೆದಿದೆ. ಕಾರ್ಯಕ್ರಮವೊಂದನ್ನು ಮುಗಿಸಿ ಮಠಕ್ಕೆ ತೆರಳುತ್ತಿದ್ದಾಗ ದಾಳಿ ಮಾಡಿದ ಯುವಕರು, ದೊಣ್ಣೆಯಿಂದ ಹಲ್ಲೆ ಮಾಡಿ ಕಾರಿನ ಗಾಜುಗಳನ್ನು ಒಡೆದುಹಾಕಿದ್ದಾರೆ.ಅದೃಷ್ಟವಶಾತ್, ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ. ಹಿಂದೂಪರ ಸಂಘಟನೆಗಳು ಘಟನೆಯನ್ನು ಖಂಡಿಸಿದ್ದು, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿವೆ. ಹಿಂದೂ ಐಕ್ಯ ವೇದಿಕೆ ಬೋವಿಕ್ಕಾನದಲ್ಲಿ ಪ್ರತಿಭಟನೆಗೆ ಕರೆ ನೀಡಿದೆ. ದಾಳಿ ಕುರಿತು ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದೆ. ಜತೆಗೆ, ಸಚ್ಚಿದಾನಂದ ಭಾರತೀ ಸ್ವಾಮೀಜಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಮನವಿ ಮಾಡಿದೆ.