IND vs AUS: 47 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಭಾರತಕ್ಕೆ ಐತಿಹಾಸಿಕ ಜಯ

Australia vs India Test: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡ ಅಮೋಘ ಗೆಲುವು ದಾಖಲಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಪರ್ತ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ  295 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಇದು ಆಸ್ಟ್ರೇಲಿಯಾದಲ್ಲಿ ಅತಿದೊಡ್ಡ ಟೆಸ್ಟ್ ಗೆಲುವು ಎಂಬುದು ವಿಶೇಷ. ಇದಕ್ಕೂ ಮುನ್ನ 1977 ರಲ್ಲಿ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ 222 ರನ್​ಗಳ ಗೆಲುವು ದಾಖಲಿಸಿದ್ದು ಇದುವರೆಗಿನ ಶ್ರೇಷ್ಠ ಜಯವಾಗಿತ್ತು. ಇದೀಗ ಬರೋಬ್ಬರಿ 47 ವರ್ಷಗಳ ಬಳಿಕ ಹೊಸ ಇತಿಹಾಸ ರಚಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.

ಒಪ್ಟಸ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 150 ರನ್​ಗಳಿಸಿ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ತಂಡವು ಭಾರತೀಯ ವೇಗಿಗಳ ಮಾರಕ ದಾಳಿಗೆ ತತ್ತರಿಸಿ ಕೇವಲ 104 ರನ್​ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಬುಮ್ರಾ 30 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು.

46 ರನ್​ಗಳ ಮುನ್ನಡೆ:

ಮೊದಲ ಇನಿಂಗ್ಸ್​ನಲ್ಲಿನ 46 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​​ಗೆ 201 ರನ್​ಗಳ ಜೊತೆಯಾಟವಾಡಿದ ಬಳಿಕ ರಾಹುಲ್ (77) ವಿಕೆಟ್ ಒಪ್ಪಿಸಿದರು.

ಮತ್ತೊಂದೆಡೆ 297 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಲ್ 3 ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ 161 ರನ್ ಬಾರಿಸಿದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 143 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದರು. ಈ ಶತಕಗಳ ನೆರವಿನಿಂದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ನಷ್ಟಕ್ಕೆ 487 ಪೇರಿಸಿ ಡಿಕ್ಲೇರ್ ಘೋಷಿಸಿತು.

534 ರನ್​ಗಳ ಗುರಿ:

ಮೊದಲ ಇನಿಂಗ್ಸ್​ನಲ್ಲಿ 46 ರನ್​ಗಳ ಹಿನ್ನಡೆ ಹೊಂದಿದ್ದ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 534 ರನ್​ಗಳ ಗುರಿ ಪಡೆಯಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಪರಿಣಾಮ 3ನೇ ದಿನದಾಟದ ಅಂತ್ಯದ ವೇಳೆಗೆ ಆಸ್ಟ್ರೇಲಿಯಾ ತಂಡವು 12 ರನ್​ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡಿತು.

ಇನ್ನು ನಾಲ್ಕನೇ ದಿನದಾಟದ ಆರಂಭದಲ್ಲೇ ಮೊಹಮ್ಮದ್ ಸಿರಾಜ್ ಉಸ್ಮಾನ್ ಖ್ವಾಜಾ (4) ಹಾಗೂ ಸ್ಟೀವ್ ಸ್ಮಿತ್ (17) ವಿಕೆಟ್ ಪಡೆದರು. ಈ ಹಂತದಲ್ಲಿ ಜೊತೆಗೂಡಿದ ಟ್ರಾವಿಸ್ ಹೆಡ್ ಹಾಗೂ ಮಿಚೆಲ್ ಮಾರ್ಚ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

ಈ ಹಂತದಲ್ಲಿ ಬುಮ್ರಾ ಟ್ರಾವಿಸ್ ಹೆಡ್ (89) ವಿಕೆಟ್ ಪಡೆದರೆ, ನಿತೀಶ್ ರೆಡ್ಡಿ ಮಿಚೆಲ್ ಮಾರ್ಷ್​ (47) ಬೌಲ್ಡ್ ಮಾಡಿದರು. ಈ ಎರಡು ವಿಕೆಟ್ ಸಿಗುತ್ತಿದ್ದಂತೆ ಮತ್ತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಟೀಮ್ ಇಂಡಿಯಾ ಬೌಲರ್​ಗಳು ಆಸ್ಟ್ರೇಲಿಯಾ ತಂಡವನ್ನು 238 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.  ಈ ಮೂಲಕ ಟೀಮ್ ಇಂಡಿಯಾ 295 ರನ್​ಗಳ ಭರ್ಜರಿ ಜಯ ಸಾಧಿಸಿ ಹೊಸ ಇತಿಹಾಸ ನಿರ್ಮಿಸಿದೆ.