ಪಂಚಮಸಾಲಿಗೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿದ್ದ ಹೋರಾಟ ಹಿಂಸಾರೂಪ ಪಡೆದುಕೊಂಡಿದೆ. ಸುವರ್ಣಸೌಧಕ್ಕೆ ನುಗ್ಗಲು ಪ್ರತಿಭಟನೆಕಾರರು ಯತ್ನಿಸಿದ್ದಾರೆ. ಇದರಿಂದ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಹೋರಾಟಗಾರರು ಪೊಲೀಸರ ಮೇಲೆಯೇ ಕಲ್ಲು ತೂರಾಟ, ಚಪ್ಪಲಿ ಎಸೆದಿದ್ದಾರೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಬೆಳಗಾವಿ ಕೊತ ಕೊತ ಕುದಿಯುತ್ತಿದೆ.
ಬೆಳಗಾವಿ, (ಡಿಸೆಂಬರ್ 11): 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆದರೂ ಸಹ ಪ್ರತಿಭಟನೆಕಾರರು ಬ್ಯಾರಿಕೇಡ್ಗಳನ್ನು ತಳ್ಳಿ ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿದ್ದಾರೆ. ಇದರಿಂದ ಸುವರ್ಣಸೌಧ ಮುಂಭಾಗ ಭಾರೀ ಹೈಡ್ರಾಮಾ ಸೃಷ್ಟಿಯಾಗಿದ್ದು, ಪೊಲೀಸರಿಗೆ ಹಾಗೂ ಪ್ರತಿಭಟನೆಕಾರರಿಗೆ ಗಾಯಗಳಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಪೊಲೀಸರು ಮತ್ತು ಪಂಚಮಸಾಲಿ ಸಮಾಜದ ಜನರ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಹೀಗಾಗಿ ಆಕ್ರೋಶಗೊಂಡ ಹೋರಾಟಗಾರರು ಸಹ ಪೊಲೀಸರ ಜತೆ ವಾಗ್ದಾದ ನಡೆಸಿದ್ದಾರೆ. ಅಲ್ಲದೇ ಬ್ಯಾರಿಕೇಡ್ಗಳನ್ನು ಕಿತ್ತೆಸೆದು ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸುತ್ತಿದ್ದಾರೆ. ಇನ್ನು ಘಟನೆಯಲ್ಲಿ ಪೊಲೀಸರು ಹಾಗೂ ಹೋರಾಟಗಾರರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಕಲ್ಲು ತೂರಾಟದಲ್ಲಿ ಇಪ್ಪತ್ತಕ್ಕೂ ಅಧಿಕ ಪೊಲೀಸರಿಗೆ ಗಾಯಗಳಾಗಿದ್ದರೆ, ಐವತ್ತಕ್ಕೂ ಅಧಿಕ ಹೋರಾಟಗಾರರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಕಿತ್ತೆಸೆದು ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದವರ ಮೇಲೂ ಸಹ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರು ಲಾಠಿಚಾರ್ಜ್ ಮಾಡಿದ್ದಾರೆ. ಪೊಲೀಸರ ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆಕಾರರ ಆಕ್ರೋಶಗೊಂಡಿದ್ದು, ಪೊಲೀಸರ ವಾಹನ ಹಾಗೂ ರಾಜಕಾರಣಿಗಳ ಕಾರುಗಳ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.
ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ ಪ್ರತಿಭಟನೆಯ ಕಾವು
ಇನ್ನು ಪೊಲೀಸರು ಲಾಠಿಚಾರ್ಜ್ ಮಾಡಿರುವುದರಿಂದ ಸಿಡಿದೆದ್ದಿರುವ ಹೋರಾಟಗಾರರ ಕಿಚ್ಚು ಮತ್ತಷ್ಟು ಹೆಚ್ಚಾಗಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ಅಡ್ಡಲಾಗಿ ಮಲಗಿ ರಸ್ತೆ ತಡೆ ನಡೆಸಿದ್ದಾರೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 6 ಕಿಲೋ ಮೀಟರ್ ನಷ್ಟು ವಾಹನಗಳು ಸಾಲುಗಟ್ಟಿ ನಿಂತಿವೆ.
ಬಸವಜಯ ಮೃತ್ಯುಂಜಯ ಸ್ವಾಮೀಜಿ ವಶಕ್ಕೆ
ಇನ್ನು ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪರಿಸ್ಥಿತಿ ಕೈಮೀರುವ ಹಂತಕ್ಕೆ ಹೋಗಿದೆ. ಹೀಗಾಗಿ ಪ್ರತಿಭಟನೆಯ ನೇತೃತ್ವ ವಹಿಸಿರುವ ಕುಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚುವರಿ ಎಸ್ಪಿ ನಾರಾಯಣ್ ಬರಮಣಿ ಅವರು ಸ್ವಾಮೀಜಿಯನ್ನು ಇನ್ನೋವಾ ಕಾರಿನಲ್ಲಿ ಕರೆದುಕೊಂಡು ಹೋದರು.