ಕಾರವಾರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರವಾರ ಬೈಸಿಕಲ್ ಕ್ಲಬ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಬೈಸಿಕಲ್ ರೈಡ್ ಹಮ್ಮಿಕೊಂಡಿದ್ದರು. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭಾನುವಾರ ಚಾಲನೆ ನೀಡಿದರು.
ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಬೆಳಿಗ್ಗೆ 4 : 30 ಕ್ಕೆ 75 ಕಿ.ಮೀ. ಬೈಸಿಕಲ್ ರೈಡ್ ಕಾರ್ಯಕ್ರಮ ಆಯೋಜಿಸಲಾಗಿತ್ತು. 150 ಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೈಸಿಕಲ್ ರೈಡ್ ನಡೆಯುವ ರಸ್ತೆಯುದ್ದಕ್ಕೂ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿ ಹಾಗೂ ವಿವಿಧ ಗ್ರಾಮ ಮಟ್ಟದ ಜನಪ್ರತಿನಿಧಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು ಕ್ರೀಡಾಪಟುಗಳನ್ನು ಹುರಿದುಂಬಿಸುವ ಕಾರ್ಯ ಮಾಡಿದರು. ಜೊತೆಗೆ ಕ್ರೀಡಾಪಟುಗಳಿಗೆ ಅನಾನುಕೂಲವಾಗದ ರೀತಿಯಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದರು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಮ್ ಸಮಾರೋಪ ಮಾಡಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ನಿತಿನ್ ಪಿಕಳೆ, ಸಹಾಯಕ ಆಯುಕ್ತೆ ವಿಜಯಲಕ್ಷ್ಮಿ ರಾಯಕೋಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಪ್ರವೀಣಕುಮಾರ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆ ಸಿಬ್ಬಂದಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.