ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಬಿ.ವೈ. ವಿಜಯೇಂದ್ರ; ಕರ್ನಾಟಕದ ರಾಜಕೀಯದ ಬಗ್ಗೆ ಚರ್ಚೆ

ನವದೆಹಲಿ: ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ನಿವಾಸದಲ್ಲಿ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಬಿಜೆಪಿ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷವಾದ್ದರಿಂದ ತಾವು ಮಾಡಿದ ಕೆಲಸಗಳ ಬಗ್ಗೆ ಈ ವೇಳೆ ಅಮಿತ್ ಶಾ ಅವರಿಗೆ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಭೇಟಿ ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಟೀಂನ ಪ್ರತ್ಯೇಕ ಹೋರಾಟದ ಬಗ್ಗೆಯೂ ವಿಜಯೇಂದ್ರ ಪ್ರಸ್ತಾಪ ಮಾಡಿದ್ದಾರೆ.

ಬಿಜೆಪಿ ನಾಯಕತ್ವಕ್ಕೆ ಬೆಂಬಲಿಸದೆ ವಕ್ಫ್​​ ಹೆಸರಿನಲ್ಲಿ ಯತ್ನಾಳ್ ಪ್ರತ್ಯೇಕ ಹೋರಾಟ ಮಾಡುತ್ತಿದ್ದಾರೆ, ಪ್ರತಿದಿನವೂ ನನ್ನ ಮತ್ತು ಯಡಿಯೂರಪ್ಪನವರ ವಿರುದ್ಧ ಯತ್ನಾಳ್ ಮಾತನಾಡುತ್ತಿದ್ದಾರೆ. ಪ್ರತ್ಯೇಕ ಸಭೆಗಳಿಂದ ಸಂಘಟನೆಗೆ ಹೊಡೆತ ಬೀಳುತ್ತಿದೆ. ಕಾಂಗ್ರೆಸ್ ವಿರುದ್ಧ ಹೋರಾಡಲು ಅನೇಕ ವಿಷಯಗಳಿವೆ. ಆದರೆ, ನಮ್ಮಲ್ಲಿನ ಭಿನ್ನಾಭಿಪ್ರಾಯದಿಂದ ಹೋರಾಟ ಗಟ್ಟಿ ಆಗುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟ ಗಟ್ಟಿ ಆಗುತ್ತಿಲ್ಲ. ಹೀಗಾಗಿ, ಭಿನ್ನಮತಕ್ಕೆ‌ ಬ್ರೇಕ್ ಹಾಕುವಂತೆ ಅಮಿತ್ ಶಾ ಅವರಿಗೆ ವಿಜಯೇಂದ್ರ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ದೆಹಲಿ ನಿವಾಸದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಹಾಗೇ, ವಚನಗಳ ಹಿಂದಿ ಭಾಷಾಂತರದ ಪುಸ್ತಕ ನೀಡಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಬಿ.ವೈ. ವಿಜಯೇಂದ್ರ, ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆದಿದ್ದೇನೆ ಎಂದಿದ್ದಾರೆ.

ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ ಅನೇಕ ಸಮಸ್ಯೆಗಳು, ಕಾಂಗ್ರೆಸ್ ಸರ್ಕಾರದ ಸಚಿವರುಗಳ ವಿರುದ್ಧದ ಆರೋಪಗಳ ಕುರಿತು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲ ವೃದ್ಧಿಗೊಳಿಸಲು ಯೋಜಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿ ಸೂಕ್ತ ಮಾರ್ಗದರ್ಶನವನ್ನು ಕೋರಲಾಯಿತು.

ದೇಶ ಸುಭದ್ರತೆಗಾಗಿ ಪ್ರಧಾನಿಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಐತಿಹಾಸಿಕ ಹೆಜ್ಜೆಗಳನ್ನಿಡುತ್ತಿರುವ ಮಾನ್ಯ ಅಮಿತ್ ಶಾ ಬಿಜೆಪಿ ಸಂಘಟನೆಗಾಗಿಯೂ ಅಷ್ಟೇ ಬದ್ಧತೆ ಹಾಗೂ ಕಾಳಜಿ ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ. ಇಂದಿನ ಅವರ ಭೇಟಿಯ ಕ್ಷಣಗಳು ಎಂದಿನಂತೆ ಇನ್ನಷ್ಟು ಉತ್ಸಾಹತುಂಬಿ ಸಂಘಟನೆಯನ್ನು ನಿರೀಕ್ಷೆಯ ಗುರಿ ತಲುಪಿಸಲು ಆತ್ಮವಿಶ್ವಾಸ ತುಂಬಿತು ಎಂದು ವಿಜಯೇಂದ್ರ ಹೇಳಿದ್ದಾರೆ.