ಜಮ್ಮು ಕಾಶ್ಮೀರದ ಬಂಡಿಪೊರಾದಲ್ಲಿ ಸೇನಾ ವಾಹನ ಕಣಿವೆಗೆ ಬಿದ್ದು ಇಬ್ಬರು ಯೋಧರ ಸಾವು; ಮೂವರಿಗೆ ಗಂಭೀರ ಗಾಯ

ಶ್ರೀನಗರ: ಇಂದು (ಜನವರಿ 4) ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ವಾಹನವು ಆಳವಾದ ಕಣಿವೆಗೆ ಬಿದ್ದ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ.

ಉತ್ತರ ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ವಾಹನ ಕಮರಿಗೆ ಬಿದ್ದು ಇಬ್ಬರು ಸೈನಿಕರ ಸಾವು, ಮೂವರು ಗಂಭೀರವಾಗಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಬಂಡಿಪೋರಾ-ಶ್ರೀನಗರ ರಸ್ತೆಯ ಎಸ್‌ಕೆ ಪಯೀನ್ ಬಳಿ ವಾಹನ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಐವರು ಯೋಧರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ಬಂಡಿಪೋರಾಕ್ಕೆ ಕರೆದೊಯ್ಯಲಾಯಿತು, ಅಲ್ಲಿ ಇಬ್ಬರು ಬರುವಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ತೀವ್ರವಾಗಿ ಗಾಯಗೊಂಡ ಮೂವರು ಸೈನಿಕರನ್ನು ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ