ಇಂದು ದೆಹಲಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ: ಬಿಹಾರ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ಸಾಧ್ಯತೆ

ನವದೆಹಲಿ: ಪಕ್ಷದ ಮುಂದಿನ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಲು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ದೆಹಲಿಯಲ್ಲಿ ಕೋರ್ ಕಮಿಟಿ ಸಭೆ ಕರೆಯಲಾಗಿದೆ. ಈ ವೇಳೆ‌ ಬಿಹಾರದಲ್ಲಿ ನಡೆದ ರಾಜಕೀಯ ವಿದ್ಯಮಾನಗಳು ಹಾಗೂ ಹೊಸ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಗಳಿವೆ. ಬಿಹಾರದಲ್ಲಿ ಜೆಡಿಯು-ಬಿಜೆಪಿ ಸರ್ಕಾರ ಪತನವಾಗಿ ಆರ್​ಜೆಡಿ-ಜೆಡಿಯು ಮೈತ್ರಿ ಸರ್ಕಾರ ರಚನೆಯಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಬಿಹಾರದ ರಾಜಕೀಯ ಬೆಳವಣಿಗೆಗಳ ಬಗ್ಗೆ ನಾಯಕರೊಂದಿಗೆ ಜೆ.ಪಿ. ನಡ್ಡಾ ಇಂದು ಚರ್ಚೆ ನಡೆಸಲಿದ್ದಾರೆ. ಜೊತೆಗೆ ಬಿಜೆಪಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.