
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ. ಜೂನ್ 20 ರಿಂದ ಶುರುವಾಗಲಿರುವ ಈ ಸರಣಿಗಾಗಿ ಹೊಸ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ಹಿಂದೇಟು ಹಾಕಿದೆ ವರದಿಯಾಗಿದೆ. ಬದಲಾಗಿ ಹಿಟ್ಮ್ಯಾನ್ಗೆ ಮತ್ತೊಂದು ಅವಕಾಶ ನೀಡಲು ಮುಂದಾಗಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ಭಾರತ ಟೆಸ್ಟ್ ತಂಡದ ನಾಯಕ ಬದಲಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಜಸ್ಪ್ರೀತ್ ಬುಮ್ರಾಗೆ ಟೆಸ್ಟ್ ತಂಡ ಕ್ಯಾಪ್ಟನ್ಸಿ ನೀಡಲಿದ್ದಾರೆ ಎಂದು ವರದಿಯಾಗಿತ್ತು.
ಆದರೆ ಇದೀಗ ಚಾಂಪಿಯನ್ಸ್ ಟ್ರೋಫಿ ಗೆದ್ದಿರುವ ರೋಹಿತ್ ಶರ್ಮಾ ಅವರನ್ನೇ ಟೆಸ್ಟ್ ತಂಡದ ನಾಯಕರನ್ನಾಗಿ ಮುಂದುವರೆಸಲು ನಿರ್ಧರಿಸಲಾಗಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಹಿಟ್ಮ್ಯಾನ್ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
5 ಪಂದ್ಯಗಳ ಬಳಿಕ?
ಒಂದು ವೇಳೆ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ವಿಫಲರಾದರೆ, ಬಿಸಿಸಿಐ ಟೆಸ್ಟ್ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡುವುದು ಖಚಿತ. ಅಂದರೆ ಇದು ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಅವರಿಗೆ ಕೊನೆಯ ಅವಕಾಶ.
ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ 5 ಇನಿಂಗ್ಸ್ಗಳಲ್ಲಿ ಕಲೆಹಾಕಿದ್ದು ಕೇವಲ 31 ರನ್ಗಳು ಮಾತ್ರ. ಹೀಗಾಗಿಯೇ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಬೇಕೆಂಬ ಕೂಗುಗಳು ಕೇಳಿ ಬಂದಿದ್ದವು.
ಆದರೀಗ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಲ್ಲದೇ, ನಾಯಕನಾಗಿಯೂ ಯಶಸ್ವಿಯಾಗಿದ್ದಾರೆ. ಹೀಗಾಗಿ ಇದೀಗ ಟೆಸ್ಟ್ ತಂಡದ ನಾಯಕತ್ವದಿಂದ ಅವರನ್ನು ಕೆಳಗಿಸಿಳಿದರೆ ತಪ್ಪು ಸಂದೇಶ ರವಾನೆಯಾದಂತಾಗುತ್ತದೆ ಎಂಬ ನಿರ್ಧಾರಕ್ಕೆ ಬಿಸಿಸಿಐ ಆಯ್ಕೆ ಸಮಿತಿ ಬಂದಿದೆ.
ಇದೇ ಕಾರಣದಿಂದ ಇದೀಗ ರೋಹಿತ್ ಶರ್ಮಾ ಅವರಿಗೆ ಮತ್ತೈದು ಪಂದ್ಯಗಳಲ್ಲಿ ಅವಕಾಶ ನೀಡಲು ನಿರ್ಧರಿಸಲಾಗಿದೆ. ಅದರಂತೆ ಜೂನ್ 20 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಪ್ರತಿಷ್ಠಿತ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಲಿದ್ದಾರೆ.
ಇನ್ನು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹಿಟ್ಮ್ಯಾನ್ ವಿಫಲರಾದರೆ ಮುಂದಿನ ಸರಣಿಗೂ ಮುನ್ನ ಭಾರತ ಟೆಸ್ಟ್ ತಂಡದ ನಾಯಕ ಬದಲಾಗುವುದು ಖಚಿತ ಎಂದೇ ಹೇಳಬಹುದು.
ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:
- ಮೊದಲ ಟೆಸ್ಟ್: 20-24 ಜೂನ್, 2025 – ಹೆಡ್ಲಿಂಗ್ಲೆ, ಲೀಡ್ಸ್
- 2ನೇ ಟೆಸ್ಟ್: ಜುಲೈ 2-6, 2025 – ಎಡ್ಜ್‌ಬಾಸ್ಟನ್, ಬರ್ಮಿಂಗ್ಹ್ಯಾಮ್
- 3ನೇ ಟೆಸ್ಟ್: ಜುಲೈ 10-14, 2025 – ಲಾರ್ಡ್ಸ್, ಲಂಡನ್
- 4ನೇ ಟೆಸ್ಟ್: 23-27 ಜುಲೈ, 2025 – ಓಲ್ಡ್ ಟ್ರಾಫರ್ಡ್, ಮ್ಯಾಂಚೆಸ್ಟರ್
- 5ನೇ ಟೆಸ್ಟ್: 31 ಜುಲೈ-4 ಆಗಸ್ಟ್, 2025 – ದಿ ಓವಲ್, ಲಂಡನ್