
ಬೆಂಗಳೂರು, ಮಾರ್ಚ್ 25: ಉತ್ತರ-ದಕ್ಷಿಣ ಟ್ರೋಫ್ ಕಾರಣದಿಂದಾಗಿ ಪೂರ್ವ ಮಾನ್ಸೂನ್ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಆಯ್ದ ಒಳನಾಡಿನ ಜಿಲ್ಲೆಗಳಲ್ಲಿ ಲಘು ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದ್ದರೆ, ಇತರ ಪ್ರದೇಶಗಳು ಬುಧವಾರ ಒಣಹವೆಯನ್ನು ಅನುಭವಿಸಲಿವೆ. ಭಾರತದ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಛತ್ತೀಸ್‌ಗಢದಿಂದ ಉತ್ತರ ಒಳನಾಡಿನ ತಮಿಳುನಾಡಿನವರೆಗೆ ವಿಸ್ತರಿಸಿರುವ ಉತ್ತರ-ದಕ್ಷಿಣ ಟ್ರೋಫ್ ರಚನೆಯಾಗುತ್ತಿದೆ ಎಂದು ವರದಿ ಮಾಡಿದೆ. ಇದು ಸಮುದ್ರ ಮಟ್ಟದಿಂದ ಸರಾಸರಿ 0.9 ಕಿ.ಮೀ ಎತ್ತರದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದ ಮೂಲಕ ಹಾದುಹೋಗುತ್ತದೆ. ಈ ವ್ಯವಸ್ಥೆಯಿಂದಾಗಿ ಈಗಾಗಲೇ ಕರ್ನಾಟಕದ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ,ಉಡುಪಿ, ರಾಯಚೂರು, ವಿಜಯಪುರ ಮುಂತಾದೆಡೆ ಮಳೆಯಾಗಿದೆ.
ಐಎಂಡಿ ಪ್ರಕಾರ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನವಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ, ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 22°C ಇರಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ 24 ಗಂಟೆಗಳ ಕಾಲ ತಾಪಮಾನ ಸ್ಥಿರವಾಗಿರುತ್ತದೆ. ಆದರೆ ನಂತರ 2-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ ಕೆಲವು ದಿನಗಳಲ್ಲಿ ದಕ್ಷಿಣ ಒಳನಾಡಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಹೆಚ್ಚಳವಾಗಲಿದೆ, ಆದರೆ ಕರಾವಳಿ ಕರ್ನಾಟಕದ ತಾಪಮಾನ 5 ದಿನಗಳವರೆಗೆ ಸ್ಥಿರವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಕರ್ನಾಟಕದ ಒಳನಾಡಿನಲ್ಲಿ ಮುಂದಿನ ದಿನಗಳಲ್ಲಿ ಕನಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ನಿರೀಕ್ಷೆಯಿದೆ. ಕಲಬುರ್ಗಿಯಲ್ಲಿ ಗರಿಷ್ಠ 38.2 ಡಿಗ್ರಿ ಸೆಲ್ಸಿಯಸ್ ಮತ್ತು ಚಾಮರಾಜನಗರದಲ್ಲಿ ಕನಿಷ್ಠ 19.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ವಿಕೋಪ ಮೇಲ್ವಿಚಾರಣಾ ಕೇಂದ್ರ ಸುರಕ್ಷತೆಯ ಕ್ರಮಗಳನ್ನು ತಿಳಿಸುವ ವಿಡಿಯೋವನ್ನು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಗುಡುಗು, ಮಿಂಚಿನ ಸಂದರ್ಭದಲ್ಲಿ ಸಾರ್ವಜನಿಕರು ಮನೆಯೊಳಗೆ ಇರಬೇಕು, ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಿ, ಪ್ರಯಾಣ ಮಾಡುವುದನ್ನು ತಪ್ಪಿಸಿ ಎಂದು ಸೂಚಿಸಿದೆ. ಯಾವುದೇ ಕಾರಣಕ್ಕೂ ಮರಗಳ ಕೆಳಗೆ ನಿಲ್ಲಬಾರದು. ಎಲೆಕ್ಟ್ರಿಕ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ಅನ್‌ಪ್ಲಗ್ ಮಾಡಬೇಕು, ನೀರಿನ ಮೂಲಗಳಿಂದ ದೂರ ಇರಬೇಕು ಎಂದು ತಿಳಿಸಿದೆ. ವಿದ್ಯುತ್‌ನಿಂದ ಚಲಿಸುವ ಎಲ್ಲಾ ಉಪಕರಣಗಳಿಂದ ದೂರ ಇರಬೇಕು, ಪ್ರಯಾಣ ಮಾಡುತ್ತಿದ್ದರೆ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ತಿಳಿಸಿದೆ.