ರಾಜ್ಯದ ಹಲವು ಕಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ 

ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ವಿವಿಧೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.ಇದರ ಜೊತೆ ಒಂಬತ್ತು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಎಂಟು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ 30 ಕಿ.ಮೀ ನಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬುಧವಾರ ಸಹ ಕಾರವಾರ ಸೇರಿದಂತೆ ಹಲವು ಭಾಗದಲ್ಲಿ ಅಲ್ಪ ಮಳೆಯಾಗಿದ್ದು ,ಇನ್ನೂ ನಾಲ್ಕು ದಿನ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದ‌ರ್ ಮತ್ತು ಗದಗ ಜಿಲ್ಲೆಯಲ್ಲಿ ಗಂಟೆಗೆ 50 ಕಿ.ಮೀನಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಆಲಿಕಲ್ಲು ಮಳೆಯಾಗಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.