ಮುಂಬೈ: ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಪ್ರಧಾನಿಯವರು ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಮೇಘನಿನಗರ ಪ್ರದೇಶದಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ನೇರವಾಗಿ ಕಾರಿನಲ್ಲೇ ತೆರಳಿದರು. ಇಲ್ಲಿ ಅಧಿಕಾರಿಗಳ ಬಳಿಕ ಘಟನೆ ಬಗ್ಗೆ ಮಾಹಿತಿ ಪಡೆದ ಮೋದಿ ಬಳಿಕ ಅಹಮದಾಬಾದ್‌ನ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ವಿಮಾನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಬಳಿಕ ಅಲ್ಲಿಂದ ಏರ್‌ಪೋರ್ಟ್‌ನತ್ತ ತೆರಳಿದ್ದಾರೆ.

ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು, ಕೇಂದ್ರ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ, ಇತರ ಭದ್ರತಾ ಅಧಿಕಾರಿಗಳು ಜೊತೆಗಿದ್ದರು.
ಇನ್ನೂ ದುರಂತದ ಬಗ್ಗೆ ನಿನ್ನೆ ಎಕ್ಸ್ ಪೋಸ್ಟ್ ಮೂಲಕ ಸಂತಾಪ ಸೂಚಿಸಿದ್ದ ಪ್ರಧಾನಿ ಮೋದಿ, ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ. ಇದರಿಂದ ಎಲ್ಲರಿಗೂ ಅತೀವ ನೋವು ಉಂಟಾಗಿದೆ. ದುರಂತದಲ್ಲಿ ಸಿಲುಕಿರುವವರಿಗೆ ನೆರವು ನೀಡುವ ವಿಚಾರವಾಗಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅಲ್ಲದೇ ನಿರಂತರವಾಗಿ ಅವರ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದರು.

ಏನಿದು ದುರಂತ?
ಜೂನ್ 12ರಂದು (ಗುರುವಾರ) ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರುತ್ತಿದ್ದ AI171 ವಿಮಾನ ಅಪಘಾತಕ್ಕೀಡಾಯಿತು. ಮಧ್ಯಾಹ್ನ 13.38ಕ್ಕೆ ಅಹಮದಾಬಾದ್‌ನಿಂದ ಹೊರಟ 12 ವರ್ಷದ ಹಳೆಯ ಬೋಯಿಂಗ್ 787-8 ವಿಮಾನ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿತ್ತು. ವಿಮಾನ ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು.
ಇದರಿಂದ ವಿಮಾನದಲ್ಲಿದ್ದ 242 ಜನರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ. ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನದಲ್ಲಿದ್ದ 230 ಪ್ರಯಾಣಿಕರ ಪೈಕಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಪ್ರಜೆಗಳು ಮತ್ತು ಓರ್ವ ಕೆನಡಾ ಇದ್ದರು. ಬದುಕುಳಿದ ಏಕೈಕ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯಾಗಿದ್ದಾರೆ ಎಂದು ಏರ್ ಇಂಡಿಯಾ ಖಚಿತಪಡಿಸಿದೆ.
ಮೇ ಡೇ – ಕೊನೇ ಸಂದೇಶ
ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು ರನ್ ವೇ 23ರಿಂದ ವಿಮಾನ ಟೇಕಾಫ್ ಆಗಿತ್ತು. ಹಾರಿದ ಮೂರ್ನಾಲ್ಕು ನಿಮಿಷಗಳಲ್ಲೇ ಪೈಲಟ್ `ಮೇ ಡೇ.. ಮೇ ಡೇ..’ ಎಂದು ಎಟಿಸಿಗೆ ಕೊನೆಯ ಸಂದೇಶ ಕೊಟ್ಟಿದ್ದರು. ಮೇ ಡೇ ಅಂದ್ರೆ ವಿಮಾನ ಡೇಂಜರ್‌ನಲ್ಲಿದ್ದು ತುರ್ತು ಅವಶ್ಯಕತೆ ಬಗ್ಗೆ ಎಮರ್ಜೆನ್ಸಿ ಕರೆ ಮಾಡುವುದು. ಎಟಿಸಿ ಮತ್ತೆ ಕರೆ ಮಾಡಿದಾಗ ವಾಪಸ್ ಪ್ರತಿಕ್ರಿಯೆ ಬಂದಿರಲಿಲ್ಲ. ಪೈಲಟ್ ಮೇ ಡೇ ಸಂದೇಶ ಕೊಟ್ಟ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿತ್ತು.
