ಬೆಂಗಳೂರು: ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್ ಹಾಗೂ ಪೊಲೀಸ್ ಕಮಿಷನರ್‌ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದಾರೆ.

ಪತ್ರದಲ್ಲೇನಿದೆ?
ಈ ಹಿಂದೆಯೂ ಹಲವಾರು ಈ ರೀತಿಯ ಪ್ರಕರಣಗಳು ನಡೆದಿದ್ದು, ನಾನು ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಸೂಕ್ತ ಕ್ರಮ ತೆಗೆದುಕೊಳ್ಳಲು ಹಾಗೂ ಈ ಸಂಬಂಧ ಖುದ್ದು ವ್ಯವಸ್ಥಾಪಕ ನಿರ್ದೇಶಕರು ಬಿಎಂಟಿಸಿ ರವರಿಗೆ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ವಿವರಿಸಲು ಕೂಡ ಸೂಚಿಸಿರುತ್ತೇನೆ. ಈ ಎಲ್ಲಾ ಕ್ರಮಗಳ ಹೊರತಾಗಿಯೂ ಮತ್ತೊಂದು ಪ್ರಕರಣವು ಎರಡು ದಿನಗಳಿಂದಷ್ಟೇ
ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ಆಘಾತಕಾರಿಯಾಗಿದೆ. ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಮಹಿಳಾ ಟೆಕ್ಕಿಯೊಬ್ಬರು ತಾವು ಕೋರಿದ ಕಡೆ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಚಾಲಕ ಹುಸೇನ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ ಎಂದಿದ್ದಾರೆ.
ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಇಂತಹ ಹಲ್ಲೆ ಮತ್ತು ಅವಮಾನಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ಕಿಡಿಗೇಡಿಗಳು ಪ್ರಾಣಕ್ಕೆ ಸಂಚಕಾರ ತರುವಂತಹ ಪ್ರಯತ್ನವನ್ನೂ ನಡೆಸಿದ್ದಾರೆ. ಚಾಕುವಿನಿಂದ ಹಲ್ಲೆ ಮಾಡಿದ ಘಟನೆಯೂ ಈ ಹಿಂದೆ ನಡೆದಿತ್ತು. ಹೀಗಾಗಿ, ಇಂತಹ ನಡೆಯನ್ನು ತಪ್ಪಿಸಲು ಪೊಲೀಸ್ ಇಲಾಖೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿ ಯಾವುದೇ ಸಾರಿಗೆ ಸಂಸ್ಥೆಯ ಸಿಬ್ಬಂದಿಯ ಹಿತರಕ್ಷಣೆ ನಮ್ಮ ಬದ್ಧತೆಯಾಗಿದ್ದು, ನಮ್ಮ ಇಲಾಖೆಯ ಸಿಬ್ಬಂದಿ ಮೇಲೆ ನಡೆಯುವ ಹಲ್ಲೆ ಮತ್ತು ಅವಮಾನವನ್ನು ಸಹಿಸಲಾಗದು. ನಮ್ಮ ಸಿಬ್ಬಂದಿಯಿಂದ ಏನಾದರೂ ಪ್ರಮಾದವಾದರೆ, ದೂರು ನೀಡಿದ ಕೂಡಲೇ ವಿಚಾರಣೆ ನಡೆಸಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ನಾವು ಕೂಡ ಮುಲಾಜಿಲ್ಲದೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ, ಕಾನೂನು ಮೀರಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ. ಹೀಗಾಗಿ, ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಈ ರೀತಿಯ ಪ್ತಕರಣಗಳು ಮರುಕಳಿಸದಂತೆ ತಡೆಯಲು ಶಾಶ್ವತ ಪರಿಹಾರವನ್ನು ರೂಪಿಸಲು ಕೋರಿದೆ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.
