ರಾಯಚೂರು: ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾರಾಯಣಪುರ (ಬಸವಸಾಗರ) ಜಲಾಶಯಕ್ಕೆ ಸಾವಿರಾರು ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ. ಹೀಗಾಗಿ, ಜಿಲ್ಲೆಯಲ್ಲಿ ನದಿ ತೀರದತ್ತ ಜನರು ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ದೇವದುರ್ಗ ತಾಲೂಕಿನ ಹೂವಿನಹೆಡಗಿ ಬಳಿ ಗಡ್ಡೆಗೂಳಿ ಶ್ರೀಬಸವೇಶ್ವರ ದೇವಸ್ಥಾನ ನೀರಿನಲ್ಲಿ ಮುಳುಗಡೆಯಾಗಿದೆ. ಶುಕ್ರವಾರ ಬೆಳಗ್ಗೆ ಜಲಾಶಯದಲ್ಲಿ 75 ಸಾವಿರ ಕ್ಯೂಸೆಕ್ ಒಳಹರಿವಿನ ಪ್ರಮಾಣವಿದೆ. ಜಲಾಶಯದ 25 ಗೇಟ್‌ಗಳನ್ನು ತೆರೆದು 75,015 ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗಿದೆ.
ಕೃಷ್ಣಾ ನದಿಯ ಮೇಲ್ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಒಂದು ವೇಳೆ ನೀರಿನ ಒಳಹರಿವು ಏರಿಕೆಯಾದರೆ, ಮತ್ತಷ್ಟು ನೀರನ್ನು ನದಿಗೆ ಹರಿಬಿಡುವ ಸಾಧ್ಯತೆಯಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ರಾಜ್ಯದಲ್ಲಿ ತಗ್ಗಿದ ಮಳೆ: ಕರ್ನಾಟಕದ ಕರಾವಳಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮುಂಗಾರು ಮಳೆ ಪ್ರಮಾಣ ಕಡಿಮೆಯಾಗಿದ್ದು, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇಲ್ಲಿ ಜೂನ್ 26ರವರೆಗೂ ಮಳೆಯಾಗಲಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿಯಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

