
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಇಂದು ಮುಂಜಾನೆಯೇ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬದುಕುಳಿದ ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಈ ಭೀಕರ ಅಪಘಾತ ಸಂಭವಿಸಿದೆ.
ಮೃತರನ್ನು ಚಿಕ್ಕನಾಯಕಹಳ್ಳಿಯ ತಮ್ಮಣ್ಣಗೌಡ (56), ಪುತ್ರ ಮುತ್ತುರಾಜ್ (28) ಮತ್ತು ಹಾಸನ ಮೂಲದ ಚಾಲಕ ಸಚಿನ್ (27) ಎಂದು ಗುರುತಿಸಲಾಗಿದ್ದು, ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸಂಜು ಎಂಬವರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಮಡವಿನಕೊಡಿ ಗ್ರಾಮದಲ್ಲಿ ಒಂದು ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಬೆಂಗಳೂರಿಗೆ ತೆರಳುವಾಗ ದುರಂತ ಸಂಭವಿಸಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ ಹಾಕಿದ್ದರೂ ಅಪಘಾತಗಳು ಸಂಭವಿಸುವುದು ತಪ್ಪಿಲ್ಲ. ಕಾರು ಅತಿವೇಗದ ಪರಿಣಾಮ ನಿಯಂತ್ರಣ ಕಳೆದುಕೊಂಡಿದೆ ಎಂದು ಊಹಿಸಲಾಗಿದೆ. ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
