ಹೆದ್ದಾರಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು: ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಡಿಸಿಗೆ ಸೂಚನೆ

ಕಾರವಾರ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಿಯಮಿತವಾಗಿ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಗತಿಗೆ ಸಂಬಂಧಿಸಿದಂತೆ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾದ ವಿಡಿಯೋ ಸಂವಾದ ಸಭೆಯಲ್ಲಿ ಭಾಗಿಯಾದ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರು ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗೆ ಆಸ್ಪದವಾಗದ ರೀತಿಯಲ್ಲಿ ಕಾಮಗಾರಿ ಪೂರ್ತಿ ಮಾಡುವ ನಿಟ್ಟಿನಲ್ಲಿ ಸೂಕ್ತ ರಕ್ಷಣೆ, ಭದ್ರತೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ರಸ್ತೆ ಕಾಮಗಾರಿ ಕುರಿತು ಕೇಳಲಾದ ಪ್ರಶ್ನೆಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ ಕೆಲವು ಅಡೆತಡೆಗಳಿದ್ದು ಅವುಗಳನ್ನು ಕಾನೂನಾತ್ಮಕವಾಗಿ ಬಗೆಹರಿಸಿಕೊಂಡು ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾರವಾರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕಾರವಾರ ಸಹಾಯಕ ಆಯುಕ್ತೆ ಜಯಲಕ್ಷ್ಮೀ ರಾಯಕೋಡ, ಐಆರ್ ಬಿ ಅಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.