ಅಂಕೋಲಾದಲ್ಲಿ ಭೀಕರ ಬಸ್ ಅಪಘಾತ: 18 ಪ್ರಯಾಣಿಕರಿಗೆ ಗಾಯ, ಐವರು ಗಂಭೀರ

ಅಂಕೋಲಾ: ಇಂದು (ಜುಲೈ 21) ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರ ಮೇಲೆ ಭೀಕರ ಬಸ್ ಅಪಘಾತ ಸಂಭವಿಸಿದೆ.

ಬೆಳಗಾವಿಯಿಂದ ಯಲ್ಲಾಪುರ-ಅಂಕೋಲಾ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಗೆ ಡಿಕ್ಕಿ ಹೊಡೆದು ಪಕ್ಕದಲ್ಲಿರುವ ಹಳ್ಳಕ್ಕೆ ಉರುಳಿ ಬಿದ್ದಿದೆ.

ಈ ಅಪಘಾತದಲ್ಲಿ 18 ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಐವರು ಗಂಭೀರ ಸ್ಥಿತಿಯಲ್ಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕಾರವಾರ ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತ ಸಂಭವಿಸುತ್ತಿದ್ದಂತೆ, ಸ್ಥಳೀಯರು, ದಾರಿಹೋಕರು ಮತ್ತು ಪತ್ರಿಕೆ ಸಾಗಾಟ ಮಾಡುತ್ತಿದ್ದ ಚಾಲಕ ಸೈಯದ್ ಜಾಕಿರ್ ಇನಾಮ್‌ದಾರ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಪ್ರಾಥಮಿಕ ನೆರವನ್ನು ಒದಗಿಸಿ, ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

ಆರಂಭಿಕ ವರದಿಗಳ ಪ್ರಕಾರ, ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗುತ್ತಿದೆ. ಬಸ್ ಹಳ್ಳಕ್ಕೆ ಬಿದ್ದರೂ ಹೆಚ್ಚಿನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವುದು ನೆಮ್ಮದಿಯ ಸಂಗತಿಯಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.