ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

ಕರಾವಳಿಯ ಮೂರು ಜಿಲ್ಲೆಗಳಿಗೆ ಭಾರಿ ಮಳೆ ಸಾಧ್ಯತೆಯಿದ್ದು, ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ , ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಸದ್ಯ ಬೆಂಗಳೂರಲ್ಲಿ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕು ಹೊರತು ಪಡಿಸಿ 11 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದಲ್ಲಿ ಮಳೆ ಅಲರ್ಟ್ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಶಾಲೆ ಮತ್ತು ಪಿಯುಸಿ ಮತ್ತು ಪದವಿ ಕಾಲೇಜಿಗೆ ರಜೆ ಘೋಷಿಸಲಾಗಿದೆ.