ನವದೆಹಲಿ, ಸೆಪ್ಟೆಂಬರ್ 15: ಹಣಕಾಸು ಸಚಿವಾಲಯದ ಅಧಿಕಾರಿಯೊಬ್ಬರು ದುರಂತ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ ಅವರಿಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ.

ಅವರು ಮತ್ತು ಪತ್ನಿ ಬಾಂಗ್ಲಾ ಸಾಹಿಬ್ ಗುರುದ್ವಾರದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ರಿಂಗ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದವರು ಮಹಿಳೆಯೊಬ್ಬರು ಎಂದು ತಿಳಿದುಬಂದಿದ್ದು, ಬಳಿಕ ಟ್ಯಾಕ್ಸಿ ಮೂಲಕ ಗಾಯಾಳು ದಂಪತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ನವಜೋತ್ ಸಿಂಗ್ ಅವರನ್ನು ಜಿಟಿಬಿ ನಗರದ ನ್ಯೂಲೈಫ್ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ಘೋಷಿಸಿದರು. ಅವರ ಪತ್ನಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅಪಘಾತದ ನಿಖರ ಕಾರಣದ ಕುರಿತು ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.
