ಕಲಬುರಗಿಯಲ್ಲಿ ಭಾರೀ ಮಳೆ-ಇಂದು, ನಾಳೆ ಶಾಲಾ ರಜೆ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎರಡು ದಿನಗಳ ಕಾಲ (ಸೆ. 27 ಮತ್ತು 28) ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಡಿಡಿಪಿಐ ಸೂರ್ಯಕಾಂತ ಮದಾನೆ ಅವರು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಸರಾ ರಜೆಯ ನಡುವೆ ಕೆಲವು ಶಾಲೆಗಳು ವಿನಾಯಿತಿ ಪಡೆದು ಕಾರ್ಯನಿರ್ವಹಿಸುತ್ತಿದ್ದರೂ, ಈಗ ಅವುಗಳಿಗೂ ರಜೆ ಅನ್ವಯವಾಗಲಿದೆ. ರಜಾ ಅವಧಿಯ ಪಾಠಗಳನ್ನು ಮುಂದಿನ ದಿನಗಳಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.