ನಾಳೆಯ ಹವಾಮಾನ: 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಕರಾವಳಿಯಲ್ಲಿ ಮಳೆ ಇಳಿಕೆ

ಬೆಂಗಳೂರು, ಅಕ್ಟೋಬರ್ 12: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಾಳೆ ವರುಣನ ವಿಶ್ರಾಂತಿ, ಕೇವಲ ನಾಲ್ಕು ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಳೆಯ ಮೈಸೂರು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ನಾಳೆ ಉತ್ತಮ ಮಳೆಯ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದಾದರೂ ಮಳೆಯ ಸಾಧ್ಯತೆ ಅಲ್ಪವಾಗಿದೆ. ಸೋಮವಾರ, ಅಕ್ಟೋಬರ್ 13ರಂದು ಬೆಂಗಳೂರಿನಲ್ಲಿ ಶೇ.70ರಿಂದ 100ರಷ್ಟು ಮಳೆಯ ಸಾಧ್ಯತೆ ಇದೆ. 1.8 ರಿಂದ 14.7 ಮಿಮೀ ಮಳೆಯಾಗುವ ನಿರೀಕ್ಷೆಯಿದೆ. ಗಾಳಿಯ ವೇಗ ಗಂಟೆಗೆ 10 ರಿಂದ 13 ಕಿಲೋಮೀಟರ್ ಇರಬಹುದು. ನಗರದ ಗರಿಷ್ಠ ಉಷ್ಣಾಂಶ 27 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.