ಮುಂದಿನ 7 ದಿನಗಳಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ; ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ಅಕ್ಟೋಬರ್ 16: ಕರ್ನಾಟಕದಾದ್ಯಂತ ಮಳೆ ಆರ್ಭಟ ಮುಂದುವರಿಯಲಿದೆ. ಇಂದಿನಿಂದ ಮುಂದಿನ ಏಳು ದಿನಗಳು, ಅಂದರೆ ಅ.22ರವರೆಗೆ, ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುವುದರೊಂದಿಗೆ, ಹಗುರದಿಂದ ಮಧ್ಯಮ ಮಟ್ಟದ ಗುಡುಗು-ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ.

ಚಾಮರಾಜನಗರ, ಕೋಲಾರ, ಹಾಸನ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ಮಂಡ್ಯ, ಬಳ್ಳಾರಿ, ದಾವಣಗೆರೆ, ಹಾವೇರಿ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.