ಬೆಂಗಳೂರು, ಅಕ್ಟೋಬರ್ 23: ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣವೇ ಕಾಣುತ್ತಿಲ್ಲ. ಒಂದು ದಿನ ಬಿಡುವು ಕೊಟ್ಟರೆ, ಮರುದಿನವೇ ಮತ್ತೆ ಮಳೆಯ ಅಬ್ಬರ ಆರಂಭವಾಗುತ್ತಿದೆ. ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಅಕ್ಟೋಬರ್ 29ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ವಿಜಯನಗರ, ತುಮಕೂರು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ವರದಿಗಳು ದಾಖಲಾಗಿವೆ — ಕಾರವಾರ, ಹೊನ್ನಾವರ, ಮಂಗಳೂರು, ಧಾರವಾಡ, ದಾವಣಗೆರೆ ಮತ್ತು ಕೊಪ್ಪಳ ಭಾಗಗಳಲ್ಲಿ ತೀವ್ರ ಮಳೆಯಾಗಿದೆ. ಉಷ್ಣಾಂಶದ ವಿಷಯದಲ್ಲೂ ವ್ಯತ್ಯಾಸ ಕಂಡುಬಂದಿದ್ದು, ಕಾರವಾರದಲ್ಲಿ 34.3°C ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 20°C ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದೆ.



