ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾದ ದಾರುಣ ಘಟನೆ ನಡೆದಿದೆ. ಮೃತರನ್ನು ಹರೀಶ್ (44) ಮತ್ತು ಉಮೇಶ್ (40) ಎಂದು ಗುರುತಿಸಲಾಗಿದೆ. ಇಬ್ಬರೂ ಸೇರಿ ಕೊಟ್ಟಿಗೆಗೆ ಸೊಪ್ಪು ತರಲು ತೆರಳಿದ ವೇಳೆ ಆನೆ ದಾಳಿ ನಡೆಸಿದ್ದು, ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದಾರೆ.

ಈ ಘಟನೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ನಡೆದಿದ್ದು, ಶೃಂಗೇರಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
