ಬೆಂಗಳೂರು, ನವೆಂಬರ್ 10: ಕರ್ನಾಟಕ ಕಾಂಗ್ರೆಸ್ ಪಕ್ಷದ ಒಳರಾಜಕೀಯ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ಅಧಿಕಾರ ಹಂಚಿಕೆ ಕುರಿತ ಚರ್ಚೆ ಮುಂದುವರಿಯುತ್ತಿದ್ದಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೊಸ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಭಾನುವಾರ ವಿಜಯಪುರ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಮೊದಲಿಗೆ, “ಪೂರ್ಣಾವಧಿ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದೇನೆ” ಎಂದು ಘೋಷಣೆ ಮಾಡಿದ್ರು. ಆದರೆ ತಕ್ಷಣವೇ ಡಿಕೆ ಶಿವಕುಮಾರ್ ಮುಖ ನೋಡಿದ ನಂತರ ಮಾತು ಸ್ವಲ್ಪ ಬದಲಿಸಿ, “ನಮ್ಮ ಸರ್ಕಾರ ಪೂರ್ಣಾವಧಿ ಆಡಳಿತ ನಡೆಸಲಿದೆ” ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಈ ತಕ್ಷಣದ ಮಾತು ಬದಲಾವಣೆ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮೈಸೂರಿನಲ್ಲಿ ನೀಡಿದ್ದ “ಹೈಕಮಾಂಡ್ ತೀರ್ಮಾನಿಸಿದರೆ” ಎನ್ನುವ ಹೇಳಿಕೆಯ ನಂತರ ಕೂಡ್ಲಿಗಿಯ ಈ ನುಡಿಯೂ ಊಹಾಪೋಹಗಳಿಗೆ ಕಾರಣವಾಗಿದೆ. ಹೀಗಾಗಿ, “ಸಿದ್ದರಾಮಯ್ಯಗೆ ನಿಜವಾಗಿಯೂ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯುವ ವಿಶ್ವಾಸವಿದೆಯೇ?” ಎನ್ನುವ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
