ಪೋಕ್ಸೋ ಕೇಸ್ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ BSY

ಬೆಂಗಳೂರು: ಮಾಜಿ ಸಿಎಂ ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಈ ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ಟ್ರಯಲ್‌ಗೆ ಅನುಮತಿ ನೀಡಿತ್ತು. ಅದಾದ ಬಳಿಕ 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು. ಸದ್ಯ ಈ ಸಂಬಂಧ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ