ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಪರ ಘೋಷಣೆ ಕೇಳಿಬಂತು.

ಕೆ.ಸಿ.ವೇಣುಗೋಪಾಲ್ ಅವರು ಮಂಗಳೂರಿನಲ್ಲಿ ಮುಖ್ಯಮಂತ್ರಿ ಭಾಗವಹಿಸುವ ಗಾಂಧೀಜಿ- ನಾರಾಯಣ ಗುರುಗಳ ಸಂವಾದ ಶತಮಾನೋತ್ಸವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದಾರೆ. ಈ ವೇಳೆ ನೂರಾರು ಮಂದಿ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ್ದರು. ಕೆ.ಸಿ.ವೇಣುಗೋಪಾಲ್ ಬರುತ್ತಿದ್ದಂತೆ ಕಾರ್ಯಕರ್ತರ ಕಡೆಯಿಂದ ಡಿ.ಕೆ., ಡಿ.ಕೆ. ಎಂಬ ಘೋಷಣೆ ಕೇಳಿಬಂದಿದೆ.
ಸಿಎಂ ಬದಲಾವಣೆ ಬಗ್ಗೆ ಮಾಧ್ಯಮದವರು ಪ್ರಶ್ನಿಸಲು ಪ್ರಯತ್ನಿಸಿದರೂ ಕೆ.ಸಿ.ವೇಣುಗೋಪಾಲ್ ಪ್ರತಿಕ್ರಿಯಿಸಲು ನಿರಾಕರಿಸಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾತನಾಡಿ, “ಕೆ.ಸಿ.ವೇಣುಗೋಪಾಲ್ ಅವರು ಕಾಂಗ್ರೆಸ್ ಕಾರ್ಯಕ್ರಮಕ್ಕೆ ಮಂಗಳೂರಿಗೆ ಆಗಮಿಸಿದ್ದಾರೆ. ಆದ್ದರಿಂದ ನಾವು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಘೋಷಣೆ ಮಾಡಿದ್ದೇವೆ. ನಮಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಇಬ್ಬರೂ ನಾಯಕರೇ. ಇದರಲ್ಲಿ ಬೇರೆ ಅರ್ಥವಿಲ್ಲ” ಎಂದು ಹೇಳಿದರು.

