ಹೊನ್ನಾವರ ಡಿ.31: ಯಾದಗಿರಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ಯದುವೀರ ಸಮೂಹ ಸಂಸ್ಥೆ ಮುಖ್ಯಸ್ಥ ಶ್ರೀಕಾಂತ ಸುಬ್ರಾಯ ನಾಯ್ಕಗೆ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ರಾಜ್ಯ ಮಟ್ಟದ ಡಾ। ಎಚ್.ಎನ್. ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಯಾದಗಿರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಸಂಘಟಿಸಿದ್ದ ಬೃಹತ್ ಸಮಾವೇಶದಲ್ಲಿ ಪ್ರಸ್ತುತ ಪ್ರಶಸ್ತಿ ಪ್ರದಾನ ನಡೆಯಿತು. ‘ಶಿಕ್ಷಣ ತಜ್ಞ ಹಾಗೂ ವಿಚಾರವಾದಿ ಎಚ್. ನರಸಿಂಹಯ್ಯ ಅವರ ಹೆಸರಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಪ್ರತಿ ವರ್ಷ ಜಿಲ್ಲಾವಾರು ಪ್ರಶಸ್ತಿ ನೀಡಲಾಗುತ್ತಿದ್ದು ಶ್ರೀಕಾಂತ ನಾಯ್ಕ ಈ ಅವರ ಸಾಮಾಜಿಕ ಸೇವೆ ಪರಿಗಣಿಸಿ ಅವರಿಗೆ ಪ್ರಸ್ತುತ ಸಾಲಿನ ರಾಜ್ಯಮಟ್ಟದ ಪ್ರಶಸ್ತಿ ನೀಡಲಾಗಿದೆ.

ಸಣ್ಣ ಕೈಗಾರಿಕೆ ಹಾಗೂ ಬೃಹತ್ ಉದ್ಯಮ ಸಚಿವ ಶರಣಬಸಪ್ಪ ದರ್ಶನಾಪುರ ಪ್ರಶಸ್ತಿ ಪ್ರದಾನ ಮಾಡಿದರು. ಇಸ್ರೋ ಮಾಜಿ ಅಧ್ಯಕ್ಷ ಡಾ.ಎ.ಎಸ್ ಕಿರಣಕುಮಾರ, ಖಾಸಾಮಠದ ಗುರುಮಿಠಕಲ್ ಶಾಂತಗುರು ಮುರುಘಾರಾಜೇಂದ್ರ ಸ್ವಾಮೀಜಿ, ಮೈಸೂರು ಉರಿಲಿಂಗಿ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಮರುಳ ಶಂಕರ ಪೀಠದ ಸಿದ್ದಬಸವ ಕಬೀರಾನಂದ ಸ್ವಾಮೀಜಿ, ಪರಿಷತ್ ಜಿಲ್ಲಾಧ್ಯಕ್ಷ ಡಾ| ಎಂ.ಜಿ. ಹೆಗಡೆ ಭಾಗವಹಿಸಿದ್ದರು. ಪರಿಷತ್‌ನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶರಣ ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟೆ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು.


