ಬೈಕಿಗೆ ಡಿಕ್ಕಿ ಹೊಡೆದ ಬಸ್: ಬೈಕ್ ಸವಾರ ಸ್ಥಳದಲ್ಲೇ ಸಾವು

ಯಲ್ಲಾಪುರ: ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಪಟ್ಟಣದ ಕೆ. ಮಿಲನ್ ಹೋಟೆಲ್ ಬಳಿ ಸೋಮವಾರ ನಡೆದಿದೆ.
ಮೃತಪಟ್ಟ ಬೈಕ್ ಸವಾರನನ್ನು ಬಾಗಲಕೋಟೆಯ ಶಿವರಾಜ ಹುನಗುಂದ (23) ಎಂದು ಗುರುತಿಸಲಾಗಿದೆ.

ಯಲ್ಲಾಪುರದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಬಸ್, ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ ನ ಮುಂಭಾಗ ಜಖಂಗೊಂಡಿದೆ.

ಬಸ್ ನಲ್ಲಿ 40 ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.