ಮೆಗಾ ಆಪರೇಷನ್ ಯಶಸ್ಸು – 13 ಕುಖ್ಯಾತ ಮಾಸ್ಟರ್ ಮೈಂಡ್‌ಗಳು ಪೊಲೀಸರ ಕೈಗೆ

ಬೆಂಗಳೂರು, ಫೆ 06: ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚನಾ ದಂಧೆಯನ್ನು ಸಿಐಡಿ ಸೈಬರ್ ಕ್ರೈಂ (CID) ವಿಭಾಗ ಭೇದಿಸಿದೆ. ನೂರಾರು ಕಡೆ ದಾಳಿ ನಡೆಸಿದ್ದ ತಂಡಗಳು, ಅಕ್ರಮಕ್ಕಾಗಿ ಬಳಸಕಾಗುತ್ತಿದ್ದ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್​ಗಗಳನ್ನು ಪತ್ತೆ ಹಚ್ಚಿದೆ.

ರಾಜ್ಯದಲ್ಲಿ ಫೆಬ್ರವರಿ 6ರಂದು ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ ಸಿಐಡಿ ತಂಡ, ಈ ಪ್ರಕರಣದ ಪ್ರಮುಖ 13 ಮಾಸ್ಟರ್ ಮೈಂಡ್‌ಗಳನ್ನು ಬಂಧಿಸಿದೆ. ಅಮಾಯಕ ಜನರ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಹಾಗೂ ಖಾತೆ ವಿವರಗಳನ್ನು ಹಣಕ್ಕಾಗಿ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡಲಾಗುತ್ತಿತ್ತು ಎಂಬುದು ಸಿಐಡಿ ತನಿಖೆ ವೇಳೆ ಬಯಲಾಗಿದೆ. ಈ ಮ್ಯೂಲ್ ಅಕೌಂಟ್‌ಗಳ ಮೂಲಕ ಆನ್‌ಲೈನ್ ವಂಚನೆ ನಡೆಸಿ ಹಣ ವರ್ಗಾವಣೆ ಹಾಗೂ ಎಟಿಎಂ ಮೂಲಕ ಹಣ ವಿತ್‌ಡ್ರಾ ಮಾಡಲಾಗುತ್ತಿತ್ತು.

ಖಾತೆ ವಿವರ ನೀಡಿದ ಅಮಾಯಕರಿಗೆ ಈ ವಂಚನೆಯ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತಿಳಿದು ಬಂದಿದೆ. ತನಿಖೆಯ ವೇಳೆ ಸುಮಾರು 42 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್‌ಗಳು ಬಳಕೆಯಲ್ಲಿರುವುದು ಪತ್ತೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆ ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸಿಐಡಿ ತಂಡ ತೀವ್ರ ನಿಗಾ ವಹಿಸಿತ್ತು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.