ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಓಡಾಟಕ್ಕೆ ಬ್ರೇಕ್; ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ

ಶಿವಮೊಗ್ಗ :

ಮಳೆಗಾಲದ ಸಂದರ್ಭದಲ್ಲಿ ಸಂಭವಿಸಬಹುದಾದ ಭೂಕುಸಿತ ಹಾಗೂ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಜೂನ್ 15ರಿಂದ ಮುಂದಿನ ಆದೇಶದವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಉಡುಪಿ–ಶಿವಮೊಗ್ಗ ನಡುವೆ ಸಂಚರಿಸುವ ಭಾರಿ ವಾಹನಗಳು ಕೊಲ್ಲೂರು ಹಾಗೂ ಶೃಂಗೇರಿ–ಜಾಗೋಳಿ ಮಾರ್ಗಗಳನ್ನು ಪರ್ಯಾಯ ರಸ್ತೆಗಳಾಗಿ ಬಳಸುವಂತೆ ಸೂಚಿಸಲಾಗಿದೆ.

ಹುಲಿಕಲ್ ಘಾಟಿಯಲ್ಲಿ ಭೂಕುಸಿತ

ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ-ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಓಡಾಟ ಹೆಚ್ಚಾದರೆ ರಸ್ತೆ ಬದಿಯ ಭೂಕುಸಿತ ಸಂಭವಿಸುವ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುವ ಅಪಾಯವಿದೆ. ಇದೇ ವೇಳೆ, ಮತ್ತೊಂದು ಪ್ರಮುಖ ಸಂಪರ್ಕ ರಸ್ತೆಯಾದ ಹುಲಿಕಲ್ ಘಾಟಿಯಲ್ಲೂ ಭೂಕುಸಿತ ಸಂಭವಿಸಿದ್ದು, ಅಲ್ಲಿನ ತಾತ್ಕಾಲಿಕ ರಕ್ಷಣಾತ್ಮಕ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ.

ಆಗುಂಬೆ ಘಾಟಿ ಮಾರ್ಗವು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಉಡುಪಿ, ಮಂಗಳೂರು ಹಾಗೂ ಮಣಿಪಾಲ್ ಆಸ್ಪತ್ರೆಗಳಿಗೆ ತುರ್ತು ಚಿಕಿತ್ಸೆಗೆ ತೆರಳಲು ಪ್ರಮುಖ ಸಂಪರ್ಕವಾಗಿದೆ. ಇದೀಗ ಈ ಆದೇಶದಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಜಿಲ್ಲಾಡಳಿತವು ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ.

ಪರ್ಯಾಯ ಸಂಚಾರ ಮಾರ್ಗಗಳು

ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು: ತೀರ್ಥಹಳ್ಳಿ-ನಗರ-ನಾಗೋಡಿ-ಕೊಲ್ಲೂರು-ಕುಂದಾಪುರ-ಉಡುಪಿ ಅಥವಾ ತೀರ್ಥಹಳ್ಳಿ-ಶೃಂಗೇರಿ-ಕೆರೆಕಟ್ಟೆ-ಬಜಗೋಳಿ-ಕಾರ್ಕಳ-ಉಡುಪಿ ಮಾರ್ಗವಾಗಿ ಸಂಚರಿಸಬೇಕು. ಉಡುಪಿಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು: ಉಡುಪಿ-ಕುಂದಾಪುರ-ಕೊಲ್ಲೂರು-ನಾಗೋಡಿ-ನಗರ-ತೀರ್ಥಹಳ್ಳಿ ಅಥವಾ ಕಾರ್ಕಳ-ಬಜಗೋಳಿ-ಕೆರೆಕಟ್ಟೆ-ಶೃಂಗೇರಿ-ತೀರ್ಥಹಳ್ಳಿ ರಸ್ತೆಯನ್ನು ಬಳಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.